ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್!
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಮಾಡಿದೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ಬಗ್ಗೆ ಟೀಕಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಮಾಡಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನಿಹದಲ್ಲಿದ್ದು, ಕಾಂಗ್ರೆಸ್ ಭರದಿಂದ ಚುನಾವಣಾ ಪ್ರಚಾರ ಆರಂಭಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ವೈಫಲ್ಯಗಳನ್ನು ಎತ್ತಿಹಿಡಿಯುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು ಪದೇ ಪದೇ ಯಡಿಯೂರಪ್ಪ ಅವರನ್ನು ಜೈಲಿಗೆ ಹೋಗಿ ಬಂದವರು ಎಂದು ವ್ಯಂಗ್ಯ ಮಾಡಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದನ್ನು ಪ್ರಶ್ನಿಸಿ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್'ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ವಿ.ಎಸ್. ಉಗ್ರಪ್ಪ ಮತ್ತಿತರ ನಾಯಕರಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣ ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಮಾಧ್ಯಮಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡದಂತೆ ನಿರ್ಬಂಧ ಹೇರಿದೆ.