ಚನ್ನರಾಯಪಟ್ಟಣ: ನಾನು ಕಾಂಗ್ರೆಸ್ ಪಕ್ಷದ ಕ್ಲರ್ಕ್ ಅಲ್ಲ, ರಾಜ್ಯದ ಆರೂವರೆ ಕೋಟಿ ಜನತೆಯ ಕ್ಲರ್ಕ್ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಗುರುವಾರ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದ ಅಮಿತ್ ಷಾ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪಕ್ಷದ ಕ್ಲರ್ಕ್ ಎಂದು ಟೀಕಿಸಿದ್ದರು. ಈ ಬಗ್ಗೆ ಇಂದಿಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಅಮಿತ್ ಶಾ ಅವರು ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರಾಧ್ಯಕ್ಷರಾಗಿ ಹೀಗೆ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ. ಇದು ಅವರ ಅಭಿರುಚಿಯನ್ನು ತೋರಿಸುತ್ತದೆ ಎಂದರು.


ಜೆಡಿಎಸ್ ಶಾಸಕರಿಗೆ ಹಣದ ಆಮಿಷ ಒಡ್ಡಿದ ಆಡಿಯೋ ಟೇಪ್ ಬಗ್ಗೆ ಮತ್ತು ಬಿಜೆಪಿ ಶಾಸಕ ಪ್ರೀತಂ ಗೌಡ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ಪ್ರೀತಂ ಗೌಡ ಅವರನ್ನು ಮುಗಿಸಲು ಜೆಡಿಎಸ್ ಸಂಚು ರೂಪಿಸಿದೆ ಎಂದು ಬಿಜೆಪಿ ನಾಯಕರ ಆರೋಪದಲ್ಲಿ ಹುರುಳಿಲ್ಲ. ಇದರಿಂದಲೇ ಬಿಜೆಪಿ ಸಂಸ್ಕೃತಿ ಏನು ಎಂಬುದು ತಿಳಿಯುತ್ತದೆ ಎಂದರಲ್ಲದೆ, ಆಡಿಯೋ ಟೇಪ್ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕೇ, ಬೇಡವೇ ಎಂಬುದನ್ನು ಸರ್ಕಾರ ಶೀಘ್ರದಲ್ಲಿಯೇ ನಿರ್ಧರಿಸಲಿದೆ ಎಂದು ಕುಮಾರಸ್ವಾಮಿ ಹೇಳಿದರು.