ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಗೆ ತಡೆ ನೀಡಿ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಈ ಬಗ್ಗೆ ಯಾವುದೇ ಕಟುವಾದ ಪದ ಪ್ರಯೋಗ ಮಾಡುವುದಿಲ್ಲ ಎಂದು ಹೇಳಿದರು. 


ಮುಂದುವರೆದು ಮಾತನಾಡುತ್ತಾ, ಪ್ರಜಾಪ್ರಭುತ್ವದ ಸ್ವಾಯತ್ತ ಸಂಸ್ಥೆಯಾಗಿ ಚುನಾವಣಾ ಆಯೋಗ ವಿಫಲವಾಗಿದೆ. ಶಾಸಕರ ರಾಜೀನಾಮೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ರ ಸಹ ಇದೆ. ಈ ಬಗ್ಗೆ ತಲೆಕೆಡಿಸಿಕೊಳ್ಳದ ಚುನಾವಣಾ ಆಯೋಗ, ಅನರ್ಹ ಶಾಸಕರ ಪರವಾಗಿ ನಿಂತು, ಅವರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯಂತರವಿಲ್ಲ ಎಂದು ಹೇಳಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 


ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ, ಈ ಪ್ರಕರಣ ಇತ್ಯರ್ಥವಾಗುವವರೆಗೂ ಉಪಚುನಾವಣೆ ನಡೆಸುವಂತಿಲ್ಲ ಎಂದು ಆದೇಶಿಸಿ, 15 ಕ್ಷೇತ್ರಗಳ ಉಪಚುನಾವಣೆಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಶಾಸಕರ ಅನರ್ಹತೆ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ನ್ಯಾಯಾಲಯ ಮುಂದೂಡಿದೆ.