ಸುಪ್ರೀಂ ಆದೇಶದ ಬಗ್ಗೆ ನಾನೇನೂ ಹೇಳುವುದಿಲ್ಲ: ಹೆಚ್.ಡಿ.ದೇವೇಗೌಡ

ಎರಡು ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಈ ಬಗ್ಗೆ ಯಾವುದೇ ಕಟುವಾದ ಪದ ಪ್ರಯೋಗ ಮಾಡುವುದಿಲ್ಲ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

Divyashree K Divyashree K | Updated: Sep 26, 2019 , 06:54 PM IST
ಸುಪ್ರೀಂ ಆದೇಶದ ಬಗ್ಗೆ ನಾನೇನೂ ಹೇಳುವುದಿಲ್ಲ: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಗೆ ತಡೆ ನೀಡಿ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಈ ಬಗ್ಗೆ ಯಾವುದೇ ಕಟುವಾದ ಪದ ಪ್ರಯೋಗ ಮಾಡುವುದಿಲ್ಲ ಎಂದು ಹೇಳಿದರು. 

ಮುಂದುವರೆದು ಮಾತನಾಡುತ್ತಾ, ಪ್ರಜಾಪ್ರಭುತ್ವದ ಸ್ವಾಯತ್ತ ಸಂಸ್ಥೆಯಾಗಿ ಚುನಾವಣಾ ಆಯೋಗ ವಿಫಲವಾಗಿದೆ. ಶಾಸಕರ ರಾಜೀನಾಮೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ರ ಸಹ ಇದೆ. ಈ ಬಗ್ಗೆ ತಲೆಕೆಡಿಸಿಕೊಳ್ಳದ ಚುನಾವಣಾ ಆಯೋಗ, ಅನರ್ಹ ಶಾಸಕರ ಪರವಾಗಿ ನಿಂತು, ಅವರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅಭ್ಯಂತರವಿಲ್ಲ ಎಂದು ಹೇಳಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ, ಈ ಪ್ರಕರಣ ಇತ್ಯರ್ಥವಾಗುವವರೆಗೂ ಉಪಚುನಾವಣೆ ನಡೆಸುವಂತಿಲ್ಲ ಎಂದು ಆದೇಶಿಸಿ, 15 ಕ್ಷೇತ್ರಗಳ ಉಪಚುನಾವಣೆಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಶಾಸಕರ ಅನರ್ಹತೆ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ನ್ಯಾಯಾಲಯ ಮುಂದೂಡಿದೆ.