ಬಿಜೆಪಿಯ ‘ಪೇಮೆಂಟ್ ಸೀಟುಗಳು’ ಕೇವಲ ಸಿಎಂ ಕುರ್ಚಿಗಷ್ಟೇ ಸೀಮಿತವಲ್ಲ: ಸಿದ್ದರಾಮಯ್ಯ
ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆಯ್ಕೆ ಮಾಡುತ್ತದೆ ಎಂದು ಜನ ತಿಳಿದುಕೊಂಡಿದ್ದರು. ಇದು ಹರಾಜಿನ ಮೂಲಕ ಮಾರಾಟವಾಗುವ ‘ಪೇಮೆಂಟ್ ಸೀಟು’ ಎನ್ನುವುದು ಶಾಸಕ ಯತ್ನಾಳ್ ಆರೋಪದಿಂದ ಬಯಲಾಗಿದೆ.
ಬೆಂಗಳೂರು: ತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂ. ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಅವರ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ಸೂಕ್ತ ತನಿಖೆಯಿಂದ ಮಾತ್ರ ಇದರ ಹಿಂದಿನ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಶನಿವಾರ ಫೇಸ್‍ಬುಕ್ ಹಾಗೂ ಟ್ವಿಟರ್‍ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಯತ್ನಾಳ್ ಆರೋಪದ ಬಗ್ಗೆ ತನಿಖೆ ನಡೆಸದಿದ್ದರೆ ಬಿಜೆಪಿ ನಾಯಕರಿಗೆ ಸಾವಿರಾರು ಕೋಟಿ ರೂ. ತೆತ್ತು ಮುಖ್ಯಮಂತ್ರಿಯಾಗಿರುವುದನ್ನು ಬಸವರಾಜ್ ಬೊಮ್ಮಾಯಿಯವರೇ ಒಪ್ಪಿಕೊಂಡಂತಾಗುತ್ತದೆ. ಇದರ ನಂತರ ಬೊಮ್ಮಾಯಿಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರುವ ಯಾವ ನೈತಿಕತೆ ಇರುವುದಿಲ್ಲ’ವೆಂದು ಹೇಳಿದ್ದಾರೆ.
‘ಯತ್ನಾಳ್ ಮಾತನಾಡುತ್ತಿರುವುದನ್ನು ಕೇಳಿದರೆ ಅವರ ಬಳಿ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಅಗಾಧವಾದ ಮಾಹಿತಿ ಇದ್ದಂತೆ ಕಾಣುತ್ತಿದೆ. ಅವರನ್ನು ವಿಚಾರಣೆ ನಡೆಸಿ ಆ ಮಾಹಿತಿಯನ್ನು ಪಡೆದರೆ ತನಿಖೆಯೂ ಸಲೀಸಾಗುತ್ತದೆ, ಸತ್ಯವೂ ಹೊರಬರುತ್ತದೆ’ ಅಂತಾ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ‘ನಿಮ್ಮ ಕೈಗೆ ಹ್ಯೂಬ್ಲೊಟ್ ವಾಚ್ ಬಂದಿದ್ದು ಚಹಾ ಕುಡಿಸಿಯೋ ಅಥವಾ ಚಹಾ ಕುಡಿದೋ?’
‘ಬಿಜೆಪಿಯಲ್ಲಿ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆಯ್ಕೆ ಮಾಡುತ್ತದೆ ಎಂದು ಜನ ತಿಳಿದುಕೊಂಡಿದ್ದರು. ಇದು ಹರಾಜಿನ ಮೂಲಕ ಮಾರಾಟವಾಗುವ ‘ಪೇಮೆಂಟ್ ಸೀಟು’ ಎನ್ನುವುದು ಶಾಸಕ ಯತ್ನಾಳ್ ಆರೋಪದಿಂದ ಬಯಲಾಗಿದೆ. ಈ ಸೀಟಿಗಾಗಿ ಹಿಂದಿನ ಮತ್ತು ಈಗಿನ ಮುಖ್ಯಮಂತ್ರಿಗಳು ಎಷ್ಟು ದುಡ್ಡು ಕೊಟ್ಟಿದ್ದಾರೆ ಎನ್ನುವುದೂ ಬಹಿರಂಗವಾಗಬೇಕು’ ಎಂದು ಅವರು ಹೇಳಿದ್ದಾರೆ.
‘ಈ ‘ಪೇಮೆಂಟ್ ಸೀಟುಗಳು’ ಕೇವಲ ಮುಖ್ಯಮಂತ್ರಿ ಕುರ್ಚಿಗೆ ಸೀಮಿತವಾಗಿಲ್ಲ, ಸಚಿವ ಸ್ಥಾನಗಳನ್ನೂ ಈ ರೀತಿ ಹರಾಜು ಕೂಗಲಾಗಿದೆ ಎನ್ನುವ ಆರೋಪ ಇದೆ. ಬಿಜೆಪಿಗೆ ಪಕ್ಷಾಂತರ ಮಾಡಿದ ಶಾಸಕರು ಯಾರಿಗೆ ಮತ್ತು ಎಷ್ಟು ದುಡ್ಡು ಸಂದಾಯ ಮಾಡಿದ್ದಾರೆ ಎನ್ನುವುದೂ ತನಿಖೆಯಾಗಬೇಕು’ ಅಂತಾ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
‘ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ, ಪಿಎಸ್‍ಐ ಮತ್ತಿತರ ಹುದ್ದೆಗಳ ನೇಮಕದ ಅಕ್ರಮ ವ್ಯವಹಾರ, ಆರೋಗ್ಯ ಇಲಾಖೆಯ ಭ್ರಷ್ಟಾಚಾರವೂ ಸೇರಿದಂತೆ ಎಲ್ಲ ಹಗರಣಗಳಿಗೂ ಯತ್ನಾಳ್ ಮಾಡಿರುವ ಆರೋಪಕ್ಕೂ ನೇರವಾದ ಸಂಬಂಧ ಇದೆ. ಇವೆಲ್ಲವುಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಮುಖ್ಯಮಂತ್ರಿ ಮತ್ತು ಸಚಿವರಾಗಲು ಪೇಮೆಂಟ್ ಮಾಡಿದವರು ಅದರ ವಸೂಲಿಗಾಗಿಯೇ ಈಗ ಕಮಿಷನ್ ದಂಧೆ ಮತ್ತು ಅಕ್ರಮ ವ್ಯವಹಾರಕ್ಕೆ ಇಳಿದಿದ್ದಾರೆ. ಇದರಿಂದ ಒಬ್ಬ ಅಮಾಯಕ ಗುತ್ತಿಗೆದಾರ ಜೀವ ಕಳೆದುಕೊಂಡ, ಸಾವಿರಾರು ಅಮಾಯಕ ಪಿಎಸ್‌ಐ ಹುದ್ದೆ ಆಕಾಂಕ್ಷಿಗಳು ಭವಿಷ್ಯ ಕಳೆದುಕೊಂಡರು’ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಈಗ ಸಾವಿರಕ್ಕೊಂದೇ ಸಿಲಿಂಡರ್!: ಇದು ಪಿಎಂ ಮೋದಿಯವರ ‘ಅಚ್ಛೆ ದಿನ್’ ಎಂದ ಕಾಂಗ್ರೆಸ್
‘ಬಸವನಗೌಡ ಪಾಟೀಲ್ ಯತ್ನಾಳ್ ಆರೋಪ ಹೊಸದೇನಲ್ಲ. ಕಳೆದ 2 ವರ್ಷಗಳಿಂದ ಇವರು ತಮ್ಮದೇ ಪಕ್ಷದ ಮುಖ್ಯಮಂತ್ರಿಗಳು, ಸಚಿವರು ಮತ್ತು ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ಮೌನವಾಗಿರುವುದು ಸಮ್ಮತಿಯ ಸೂಚನೆಯೇ?’ ಎಂದು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.