ಬೆಂಗಳೂರು: ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸುವುದನ್ನು ಕೆಎಂಎಫ್ ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನಂದಿನಿ ಬ್ರಾಂಡ್ ಅನ್ನು ಹಳ್ಳ ಹಿಡಿಸಲು ವ್ಯವಸ್ಥಿತ ಸಂಚು ಹೂಡಲಾಗಿದೆ ಎಂದು ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ನಂದಿನಿಯು ಅಮುಲ್ ಅಡಿಯಾಳು ಅಲ್ಲ, ಕರ್ನಾಟಕವು ಗುಜರಾತಿನ ವಸಾಹತು ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. 


ಇದನ್ನೂ ಓದಿ- "ಮೋದಿ ಕಳ್ಳ" ಎಂದಿದ್ದೇ ತಡ ಕಳ್ಳ ಮೋದಿಗಳೆಲ್ಲ ಬಿಲದಿಂದ ಹೊರಬರುತ್ತಿವೆ!: ಕಾಂಗ್ರೆಸ್


ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ?


ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಕೇಂದ್ರ ಬಿಜೆಪಿ ಸರಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ದಹಿ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ? ಎಂದು ಪ್ರಶ್ನಿಸಿದ್ದಾರೆ. 


ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಮಾಜಿ ಮುಖ್ಯಮಂತ್ರಿಗಳು ಆರೋಪಿಸಿದ್ದಾರೆ. 


ಕಾಂಗ್ರೆಸ್ ಕುಟಿಲತೆ, ಕಪಟತನದ ಕಾಮಾಲೆ ಕಾಯಿಲೆಯಿಂದ ಬಳಲುತ್ತಿದೆ: ಎಚ್‍ಡಿಕೆ


ಈಚೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಬ್ಬರೂ ಕರ್ನಾಟಕಕ್ಕೆ ಬಲು ಬಿಡುವಾಗಿ ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ. ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ.


ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು. ಇದು ರಾಜ್ಯ ಬಿಜೆಪಿ ಸರಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ. ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ  ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ರಾಜ್ಯ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದವರು ಈ ಮೂಲಕ ಆಗ್ರಹಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...