Hanagal, Sindagi Bypolls: ಇಂದು ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಗೆ ಮತದಾನ

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪಚುನಾವಣೆಯ ರಣಕಣವು ರಾಜಕೀಯ ನಾಯಕರ ವಾಕ್ಸಮರಕ್ಕೆ ಸಾಕ್ಷಿಯಾಗಿದೆ.

Written by - Zee Kannada News Desk | Last Updated : Oct 30, 2021, 07:07 AM IST
  • ಇಂದು ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ನಡೆಯಲಿದೆ
  • ಎರಡೂ ಕ್ಷೇತ್ರಗಳಲ್ಲಿ ಶನಿವಾರ ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ಮತದಾನ ನಡೆಯಲಿದೆ
  • ಭಾರೀ ಕುತೂಹಲ ಮೂಡಿಸಿರುವ ಈ ಉಪಚುನಾವಣೆ 3 ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯಾಗಿದೆ
Hanagal, Sindagi Bypolls: ಇಂದು ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಗೆ ಮತದಾನ title=
ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿನ ಕಣಗಳಾಗಿರುವ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ(Hanagal and Sindagi Bypolls)ಗೆ ಇಂದು(ಅ.30) ಮತದಾನ ನಡೆಯಲಿದೆ. ಕಣದಲ್ಲಿರುವ ಘಟಾನುಘಟಿ ನಾಯಕರ ಹಣೆಬರಹವನ್ನು ಮತದಾರ ಬರೆಯಲಿದ್ದಾನೆ.

ಈ ಎರಡೂ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ಮತದಾನ(Karnataka Bypolls) ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಿಂಧಗಿ(Sindagi)ಯಲ್ಲಿ ಮತದಾನಕ್ಕೆ ಸಂಬಂಧಿಸಿದಂತೆ ಒಟ್ಟು 297 ಮತದಾನ ಕೇಂದ್ರ ಸ್ಥಾಪಿಸಲಾಗಿದ್ದು, ಮತದಾನ ಕಾರ್ಯಕ್ಕೆ 1,308 ಸಿಬ್ಬಂದಿ ನಿಯೋಜಿಸಲಾಗಿದೆ. ಒಟ್ಟು 2,34,584 ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.

ಇನ್ನು ಹಾನಗಲ್(Hanagal) ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನಕ್ಕೆ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 1,155 ಸಿಬ್ಬಂದಿ ನಿಯೋಜಿಸಲಾಗಿದೆ. ಒಂದು ಅಂಗವಿಕಲ ಸ್ನೇಹಿ ಮತಗಟ್ಟೆ ಹಾಗೂ 2 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಒಟ್ಟು 2,04,481 ಮತದಾರರಿದ್ದು, ತಮ್ಮ ಹಕ್ಕು ಚಲಾಯಿಸಲಿದ್ದಾರೆ. 121 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ಇದನ್ನೂ ಓದಿ: ಡಿಕೆಶಿ ಮುಖ್ಯಮಂತ್ರಿ ಕನಸಿಗೆ ಸಿದ್ದರಾಮಯ್ಯ ಎಳ್ಳು ನೀರು ಬಿಡುತ್ತಿದ್ದಾರೆ: ಬಿಜೆಪಿ

3 ಪಕ್ಷಗಳಿಗೆ ಪ್ರತಿಷ್ಠೆಯ ಕಣ

ಭಾರೀ ಕುತೂಹಲ ಮೂಡಿಸಿರುವ ಈ ಉಪಚುನಾವಣೆ(Karnataka Bypolls)ಯು 3 ಪ್ರಮುಖ ಪಕ್ಷಗಳಿಗೆ ಪ್ರತಿಷ್ಠೆಯಾಗಿದೆ. ಬಹುಮುಖ್ಯವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭರ್ಜರಿ ಪೈಪೋಟಿ ನಡೆಯುತ್ತಿದೆ. ಸಿಂಧಗಿಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ರಮೇಶ್ ಭೂಸನೂರ, ಕಾಂಗ್ರೆಸ್‍ನಿಂದ ಮಾಜಿ ಸಚಿವ ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ, ಜೆಡಿಎಸ್‍ನಿಂದ ನಾಜಿಯಾ ಶಕೀಲಾ ಅಂಗಡಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿ ಒಟ್ಟು 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಹಾನಗಲ್‍ನಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಬಿಜೆಪಿಯಿಂದ ಶಿವರಾಜ ಶರಣಪ್ಪ ಸಜ್ಜನರ್, ಕಾಂಗ್ರೆಸ್‍ನಿಂದ ಶ್ರೀನಿವಾಸ್ ಮಾನೆ ಮತ್ತು ಜೆಡಿಎಸ್‍ನಿಂದ ನಿಯಾಜ್ ಶೇಖ್ ಸೇರಿದಂತೆ 13 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದಾರೆ.

ರಣಕಣದಲ್ಲಿ ರಾಜಕೀಯ ನಾಯಕರ ವಾಕ್ಸಮರ

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪಚುನಾವಣೆಯ ರಣಕಣವು ರಾಜಕೀಯ ನಾಯಕರ ವಾಕ್ಸಮರಕ್ಕೆ ಸಾಕ್ಷಿಯಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ(, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನ ಪ್ರಮುಖ ನಾಯಕರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.   

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಸೇರಿದಂತೆ ಬಿಜೆಪಿ ನಾಯಕರು ಕೂಡ ಎರಡೂ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದರು. ಪ್ರಮುಖ ಪಕ್ಷಗಳ ನಾಯಕರ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದು, ಉಪಚುನಾವಣೆಯು ಭಾರೀ ಕುತೂಹಲ ಮೂಡಿಸಿದೆ. ಅಂತಿಮವಾಗಿ ಮತದಾರ ಯಾರಿಗೆ ವಿಜಯದ ಮಾಲೆ ಹಾಕುತ್ತಾನೆಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯರಿಂದ ಹಿಂದೂ ಧರ್ಮ ಒಡೆಯುವ ಪ್ರಯತ್ನ: ಬಿಜೆಪಿ

ಸಿಎಂ ಬೊಮ್ಮಾಯಿಗೆ ನಾಯಕತ್ವ ಸಾಬೀತುಪಡಿಸುವ ಅನಿವಾರ್ಯತೆ

ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಆಡಳಿತಾರೂಢ ಬಿಜೆಪಿ(BJP), ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ನಿರ್ಣಾಯಕವಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ರಾಜೀನಾಮೆ ನೀಡಿದ ನಂತರ, ಬಸವರಾಜ್ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದೆ. ಈ ಎರಡೂ ಕ್ಷೇತ್ರಗಳನ್ನು ಗೆದ್ದು ತಮ್ಮ ನಾಯಕತ್ವವನ್ನು ಸಾಬೀತುಪಡಿಸುವ ಅನಿವಾರ್ಯತೆ ಸಿಎಂ ಬೊಮ್ಮಾಯಿಯವರಿಗೆ ಎದುರಾಗಿದೆ. ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಕೇಸರಿ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದರು. ಕಾಂಗ್ರೆಸ್ ನಾಯಕರು ಕೂಡ ಬಿಜೆಪಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಅಬ್ಬರದ ಪ್ರಚಾರ ನಡೆಸಿದ್ದು, ಸಿದ್ದರಾಮಯ್ಯ, ಡಿಕೆಶಿ ಮತದಾರರ ಓಲೈಕೆ ಮಾಡಿದ್ದರು. ಇಂದು ನಡೆಯಲಿರುವ ಎರಡೂ ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆಯು ನವೆಂಬರ್ 2 ರಂದು ನೆಡಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News