By-Election Results: ನಾಳೆ ಹಾನಗಲ್, ಸಿಂದಗಿ ಉಪಚುನಾವಣೆ ಫಲಿತಾಂಶ

ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ನಡೆಯಲಿದೆ.

Written by - Zee Kannada News Desk | Last Updated : Nov 1, 2021, 09:43 PM IST
  • ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನ.2ರಂದು ನಡೆಯಲಿದೆ
  • ಮಂಗಳವಾರ ಗೊತ್ತಾಗಲಿದೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಭವಿಷ್ಯ
  • ಅ.30ರಂದು ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು
By-Election Results: ನಾಳೆ ಹಾನಗಲ್, ಸಿಂದಗಿ ಉಪಚುನಾವಣೆ ಫಲಿತಾಂಶ title=
ಉಪಚುನಾವಣೆಯ ಮತ ಎಣಿಕೆ ನ.2ರಂದು ನಡೆಯಲಿದೆ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆ(Karnataka Bypolls Results 2021)ಯ ಮತ ಎಣಿಕೆ ನಾಳೆ (ನ.2) ನಡೆಯಲಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ನಡೆಯಲಿದೆ. ಈಗಾಗಲೇ ಎರಡು ಕ್ಷೇತ್ರಗಳ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಯಾರಿಗೆ ಗೆಲುವು ಸಿಗುತ್ತದೆ ಎಂಬುದರ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ.

ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅ.30ರಂದು ಉಪಚುನಾವಣೆ ನಡೆದಿತ್ತು. ಕೋವಿಡ್(COVID-19) ಹಿನ್ನೆಲೆ 12 ಗಂಟೆಗಳ ಕಾಲ (ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ) ನಡೆದ ಮತದಾನ ಪ್ರಕ್ರಿಯೆಯಲ್ಲಿ ಹಾನಗಲ್(Hangal Bypoll) ನಲ್ಲಿ ದಾಖಲೆಯ ಶೇ.83.76ರಷ್ಟು ಮತ್ತು ಸಿಂದಗಿಯಲ್ಲಿ ಶೇ.69.41ರಷ್ಟು ಮತದಾನವಾಗಿತ್ತು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಅಕ್ಕಿ: ಸಿದ್ದರಾಮಯ್ಯ

ಸಿಂಧಗಿ(Sindagi By Election)ಯಲ್ಲಿ ಬಿಜೆಪಿಯಿಂದ ಮಾಜಿ ಶಾಸಕ ರಮೇಶ್ ಭೂಸನೂರ, ಕಾಂಗ್ರೆಸ್‍ನಿಂದ ಮಾಜಿ ಸಚಿವ ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ, ಜೆಡಿಎಸ್‍ನಿಂದ ನಾಜಿಯಾ ಶಕೀಲಾ ಅಂಗಡಿ ಹಾಗೂ ಪಕ್ಷೇತರ ಅಭ್ಯರ್ಥಿಗಳು ಸೇರಿ ಒಟ್ಟು 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇನ್ನು ಹಾನಗಲ್‍ನಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಬಿಜೆಪಿಯಿಂದ ಶಿವರಾಜ ಶರಣಪ್ಪ ಸಜ್ಜನರ್, ಕಾಂಗ್ರೆಸ್‍ನಿಂದ ಶ್ರೀನಿವಾಸ್ ಮಾನೆ ಮತ್ತು ಜೆಡಿಎಸ್‍ನಿಂದ ನಿಯಾಜ್ ಶೇಖ್ ಸೇರಿದಂತೆ 13 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದರು. ಮತದಾರ ಬರೆದಿರುವ ಇವರ ಭವಿಷ್ಯವು ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ನಾಳೆ ಗೊತ್ತಾಗಲಿದೆ. ಯಾರಿಗೆ ವಿಜಯಲಕ್ಷ್ಮೀ ಒಲಿಯುತ್ತಾಳೆಂಬುದು ಕುತೂಹಲ ಕೆರಳಿಸಿದೆ.    

ಈ ಎರಡೂ ಕ್ಷೇತ್ರಗಳ ಉಪಚುನಾವಣೆ(Karnataka Byelections)ಯು ಬಿಜೆಪಿ(BJP), ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಪ್ರತಿಷ್ಠೆಯಾಗಿದೆ. ಹೀಗಾಗಿ 3 ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಪಣತೊಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದವು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪ್ರಲ್ಹಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಅಬ್ಬರದ ಪ್ರಚಾರ ನಡೆಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಕಾಂಗ್ರೆಸ್ ಪರವಾಗಿ, ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜೆಡಿಎಸ್ ಪರ ಪ್ರಚಾರ ನಡೆಸಿದ್ದರು.  

ಇದನ್ನೂ ಓದಿ: ರಾಜ್ಯದಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ: ಬಿಜೆಪಿ ಟೀಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News