ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಒಕ್ಕೂಟ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನು ಎರಡು ಹಂತಗಳಲ್ಲಿ ಮಾಡಲಾಗುವುದು. ಮೊದಲ ಹಂತದ ಸಂಪುಟ ವಿಸ್ತರಣೆ ಜೂ.6 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಜೆಡಿಎಸ್ ಪಕ್ಷದ 9 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್'ನ ಎಂಟರಿಂದ ಒಂಬತ್ತು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.  ಎರಡನೇ ಹಂತದಲ್ಲಿ ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ" ಎಂದರು. 


ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಹಾಗಾಗಿ ನನ್ನ ನಿರ್ಧಾರವೇ ಅಂತಿಮ ಎಂದು ಸಿಎಂ ಹೇಳಿದರು.


ಜೂನ್ 1 ರಂದು ಸಮ್ಮಿಶ್ರ ಸರ್ಕಾರದ ಒಪ್ಪಂದದ ಪ್ರಕಾರ, ಕಾಂಗ್ರೆಸ್'ನ 22 ಶಾಸಕರಿಗೆ ಮತ್ತು ಜೆಡಿಎಸ್'ನ 12 ಶಾಸಕರಿಗೆ ಮಂತ್ರಿಮಂಡಲ ಸ್ಥಾನಗಳನ್ನು ನಿಗದಿಪಡಿಸಲಾಗಿದೆ. ಕಾಂಗ್ರೆಸ್ಗೆ ಗೃಹ, ನೀರಾವರಿ, ಆರೋಗ್ಯ, ಕೃಷಿ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಖಾತೆಗಳನ್ನು ನೀಡಲಾಗಿದ್ದು, ಜೆಡಿಎಸ್ಗೆ ಹಣಕಾಸು ಮತ್ತು ಅಬಕಾರಿ, ನಾಗರಿಕ ಸೇವೆ, ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾರಿಗೆ ಖಾತೆ ನೀಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.


ಒಕ್ಕೂಟದ ಸುಗಮ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡಲು ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಮೊದಲೇ ಸಹಕಾರ ಮತ್ತು ಮೇಲ್ವಿಚಾರಣಾ ಸಮಿತಿ ಸ್ಥಾಪನೆಗೆ ಒಪ್ಪಿಗೆ ನೀಡಿದ್ದವು. ಅದರಂತೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಮಿತಿ ಅಧ್ಯಕ್ಷತೆ ವಹಿಸಲಿದ್ದು, ಜೆಡಿಎಸ್ ನಾಯಕ ಡ್ಯಾನಿಷ್ ಅಲಿ ಅವರನ್ನು ಸಮಿತಿಯ ಸಂಚಾಲಕರಾಗಿ ನೇಮಕ ಮಾಡಲಾಗಿದೆ ಎಂದರು.