ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ ಸಿದ್ದರಾಮಯ್ಯ
Lok Sabha Elections 2024 : ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಸಿಎಂ ಮಾತನಾಡಿದರು.
ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ 'ಕೈ'ಗೆ ಬರಲೇಬೇಕು. ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.
ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು ವಿಶ್ವಾಸದಿಂದ ಹೇಳಿದರು.
ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ ಇದೆ ಎಂದರು.
ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.
ಇದನ್ನೂ ಓದಿ: Lok sabha Election 2024: ಲೋಕಸಭಾ ಚುನಾವಣೆಯ ನಂತರ ಬದಲಾಗ್ತಾರಾ ಸಿಎಂ?
ಹೀಗಾಗಿ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ , ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಟೀಕಿಸಿದರು.
ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ ಎಂದರು.
ಶ್ರೀರಾಮಚಂದ್ರ, ಸೀತಾ , ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದೆ ಎಂದರು.
ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿ ಮತ್ತು ನರೇಂದ್ರ ಮೋದಿ ಹೇಳಿದ್ದರಲ್ಲಿ ಒಂದನ್ನೂ ಮಾಡಿಲ್ಲ ಎಂದು ಅವರ ವಿಫಲ ಅಶ್ವಾಸನೆಗಳ ಪಟ್ಟಿಯನ್ನೇ ನೀಡಿದರು.
ಸೆಕ್ಯುಲರ್ ಏನಾಯ್ತು?
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿದ್ದಾರೆ ಎಂದರು.
ತಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಸಲಹೆ ನೀಡಿದರು.
ನಮ್ಮ ಪಾಲು ಕೇಳೋಕೆ ಸುಪ್ರೀಂಕೋರ್ಟ್ ಗೆ ಹೋಗಬೇಕಾಯ್ತು
ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ: Chitradurga: ನೀಟ್ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವು!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.