362 ಕೆಎಎಸ್ ಅಧಿಕಾರಿಗಳ ನೇಮಕಾತಿ ರದ್ದುಪಡಿಸಿದ ಹೈಕೋರ್ಟ್
2011ನೇ ಸಾಲಿನ ಕೆಪಿಎಸ್`ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ 362 ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.
ಬೆಂಗಳೂರು: 2011ನೇ ಸಾಲಿನ ಕೆಪಿಎಸ್'ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ 362 ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ.
ಪರೀಕ್ಷಾ ಅಕ್ರಮಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿ 2011ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಗಳಾಗಿ ಆಯ್ಕೆಯಾಗಿದ್ದ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಅಂತಿಮ ಪಟ್ಟಿ ಕಾನೂನು ಬಾಹಿರ ಎಂದು ಹೈಕೋರ್ಟ್ ಹೇಳಿದ್ದು, ಇದರಿಂದ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶದಂತೆ ಆರೋಪಗಳ ನಡುವೆಯೂ ನೇಮಕಾತಿಗೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತೀರ್ಪಿನಿಂದ ತೀವ್ರ ಹಿನ್ನೆಡೆಯಾದಂತಾಗಿದೆ.
2011ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) 2016ರ ಅಕ್ಟೋಬರ್ 19ರಂದು ನೀಡಿದ್ದ ಆದೇಶ ರದ್ದು ಕೋರಿ ಆರ್.ರೇಣುಕಾಂಬಿಕೆ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿ, ಶುಕ್ರವಾರ ಪರಿಶೀಲಿಸಿದ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ.