ಕೆಪಿಸಿಸಿ ಮಾಜಿ ಅಧ್ಯಕ್ಷರಿಗೆ, ನೂತನ ಕೆಪಿಸಿಸಿ ಅಧ್ಯಕ್ಷರಿಂದ ಸನ್ಮಾನ
ಕಳೆದ ಎಂಟು ವರ್ಷದಿಂದ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಡಾ.ಜಿ. ಪರಮೇಶ್ವರ್
ಬೆಂಗಳೂರು: ಕಳೆದ ಎಂಟು ವರ್ಷದಿಂದ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡಿಸಿ ಹಾಗೂ ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು ಸನ್ಮಾನಿಸಿ ಗೌರವ ಸಮರ್ಪಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡುರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಅವರನ್ನು ನೇಮಕ ಮಾಡಿ ಬುಧವಾರ ಎಐಸಿಸಿ ಅಧಿಕೃತ ಘೋಷಣೆ ಹೊರಡಿಸಿತು. ಈ ಹಿನ್ನೆಲೆಯಲ್ಲಿ ಕಳೆದ ಎಂಟು ವರ್ಷದಿಂದ ಪಕ್ಷವನ್ನು ಮುನ್ನಡೆಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ನೂತನ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಗೌರವಿಸಿದರು.
2019ರ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ದಿನೇಶ್ ಗುಂಡೂರಾವ್ ಸಮರ್ಥರು
ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡುರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ನೇಮಕ ಮಾಡಿ ಬುಧವಾರ ಎಐಸಿಸಿ ಅಧಿಕೃತ ಘೋಷಣೆ ಹೊರಡಿಸಿದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಹಾಗೂ ಈಶ್ವರ್ ಖಂಡ್ರೆ ಅವರನ್ನ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಹೈಕಮಾಂಡ್ ನಿರ್ಧಾರ ಸ್ವಾಗತಾರ್ಹ ಎಂದು ಹೇಳಿದ್ದರು.
ಎಂಟು ವರ್ಷಗಳ ಕಾಲ ನನಗೆ ಕೆಪಿಸಿಸಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಹಾಗೂ ಸೋನಿಯಾಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅನೇಕ ಮುಖಂಡರು,ರಾಷ್ಟ್ರೀಯ ನಾಯಕರಿಗೂ ಕೃತಜ್ಞತೆ ಅರ್ಪಿಸುತ್ತೇನೆ. ದಿನೇಶ್ ಗುಂಡೂರಾವ್ ಅವರು ಯುವಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ, ನಾಲ್ಕು ಬಾರಿ ಶಾಸಕರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಅದೇರೀತಿ ಈಶ್ವರ್ ಖಂಡ್ರೆ ಅವರು ಸಹ ಜಿಲ್ಲಾಧ್ಯಕ್ಷರಾಗಿ, ಶಾಸಕ, ಸಚಿವರಾಗಿ ಅನುಭವ ಹೊಂದಿದ್ದಾರೆ. ಈ ಇಬ್ಬರೂ ಮುಖಂಡರು ಪಕ್ಷವನ್ನು ಮುನ್ನಡೆಸುವ ಹಾಗೂ 2019ರ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಸಮರ್ಥರಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.