ಕೆಪಿಸಿಸಿ ಪಟ್ಟಾಭಿಷೇಕ; ಎಂ.ಬಿ.ಪಾಟೀಲ್ ಪರ ಸಿದ್ದು ಬ್ಯಾಟಿಂಗ್?

ಲಿಂಗಾಯತ ಸಮುದಾಯದ ಎಂ.ಬಿ. ಪಾಟೀಲ್ ಅವರಿಗೆ ಕೆಪಿಸಿಸಿ ಪಟ್ಟ ಕಟ್ಟಿದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಲಾಭವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಮನವರಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Last Updated : Jan 15, 2020, 01:01 PM IST
ಕೆಪಿಸಿಸಿ ಪಟ್ಟಾಭಿಷೇಕ; ಎಂ.ಬಿ.ಪಾಟೀಲ್ ಪರ ಸಿದ್ದು ಬ್ಯಾಟಿಂಗ್? title=

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟ ಕಟ್ಟಲು ಇನ್ನೂ ಕೂಡ ಗೊಂದಲ ಮುಂದುವರೆದಿದೆ. ನಿನ್ನೆ ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಇಂದು ರಾಹುಲ್ ಗಾಂಧಿಯವರ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಪ್ರಭಾವಿ ನಾಯಕ ಟ್ರಬಲ್ ಶೂಟರ್ ಎಂದೇ ಕರೆಯಲ್ಪಡುವ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಮಟ್ಟದಲ್ಲಿ ಲಾಭಿ ನಡೆಸಿದ್ದಾರೆ ಎಂಬ ಮಾತುಗಳು ಒಂದೆಡೆ ಕೇಳಿಬರುತ್ತಿದೆ. ಇನ್ನೊಂದೆಡೆ ಎಂ.ಬಿ. ಪಾಟೀಲ್ ಅವರಿಗೆ ಪಟ್ಟ ಕಟ್ಟುವಂತೆ ಸಿದ್ದರಾಮಯ್ಯ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸೋನಿಯಾ ಗಾಂಧಿಯವರೊಂದಿಗೆ ಭೇಟಿ ಬಳಿಕ ಮಂಗಳವಾರವೇ ಬೆಂಗಳೂರಿಗೆ ಹೊರಡಬೇಕಿದ್ದ ಸಿದ್ದರಾಮಯ್ಯ, ರಾಹುಲ್ ಗಾಂಧಿ ಭೇಟಿಗಾಗಿ ಬುಧವಾರವೂ ದೆಹಲಿಯಲ್ಲಿಯೇ ಬೀಡುಬಿಟ್ಟಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.

ಮಂಗಳವಾರ ಸೋನಿಯಾ ಗಾಂಧಿಯವರನ್ನು ಭೇಟಿಯಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಮೇಲೆ ಇಡಿ ಪ್ರಕರಣ ಇದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆಗೆ ಕಾರಣವಾಗಬಹುದು. ಇದಲ್ಲದೆ ರಾಜ್ಯದಲ್ಲಿ ಪ್ರಸ್ತುತ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾದಲ್ಲಿ, ಲಿಂಗಾಯತ ಸಮುದಾಯದ ಯಡಿಯೂರಪ್ಪ ಪ್ರಭಾವಿ ನಾಯಕರಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಆ ಪಕ್ಷದಲ್ಲಿ ಭಿನ್ನಮತ ಭುಗಿಲೇಳುವ ಸಾಧ್ಯತೆಯಿದೆ. ಒಂದೊಮ್ಮೆ ಲಿಂಗಾಯತ ಸಮುದಾಯದ ಎಂ.ಬಿ. ಪಾಟೀಲ್ ಅವರಿಗೆ ಕೆಪಿಸಿಸಿ ಪಟ್ಟ ಕಟ್ಟಿದರೆ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಲಾಭವಾಗಲಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಬಹುದು ಎಂಬ ಅಂಶವನ್ನು ಸಿದ್ದರಾಮಯ್ಯ ಸೋನಿಯಾ ಗಾಂಧಿಯವರಿಗೆ ಮನವರಿಕೆ ಮಾಡಿದ್ದಾರೆ ಎಂಬ ಮಾಹಿತಿಗಳೂ ಲಭ್ಯವಾಗಿವೆ.

ಇವೆಲ್ಲದರ ನಡುವೆ ಪಕ್ಷವನ್ನು ಮತ್ತೆ ಮೇಲೆತ್ತಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರಿಗೆ ಪಟ್ಟ ಕಟ್ಟಲಿದೆಯೇ? ಅಥವಾ ಸಿದ್ದರಾಮಯ್ಯ ಮಾತಿಗೆ ಮನ್ನಣೆ ನೀಡಿ ಎಂ.ಬಿ. ಪಾಟೀಲ್ ಗೆ ಮಣೆ ಹಾಕಲಿದೆಯೇ? ಎಂಬುದನ್ನು ಕಾದು ನೋಡಬೇಕಿದೆ.

Trending News