ಕೆಪಿಎಸ್‌ಸಿ ನೇಮಕಾತಿ ಗೊಂದಲಕ್ಕೆ ತೆರೆ ಎಳೆದ ಸರ್ಕಾರ
ಕೆಪಿಎಸ್‌ಸಿ ನೇಮಕಾತಿಯಲ್ಲಿ ಹಳೇ ನಿಯಮವನ್ನೇ ಮುಂದುವರಿಸಲು ನಿರ್ಧರಿಸಿದ ಸರ್ಕಾರ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ನೇಮಕಾತಿ ಮೀಸಲಾತಿ ಕುರಿತ ಗೊಂದಲಕ್ಕೆ ತೆರೆ ಎಳೆದಿರುವ ಸರ್ಕಾರ ಹಳೇ ನಿಯಮವನ್ನೇ ಅಂದರೆ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳು ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದಡಿ ಪ್ರವೇಶ ಪಡೆಯಲು ಇರುವ ಅವಕಾಶವನ್ನು ಮುಂದುವರಿಸಲು ನಿರ್ಧರಿಸಿದೆ.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸೋಮವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಕೆಪಿಎಸ್‌ಸಿ ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ ಕುರಿತು ಪ್ರಸ್ತಾಪವಾದ ವಿಷಯ ತೀವ್ರ ಚರ್ಚೆಯಾಗಿ ಬಹುತೇಕ ಸಚಿವರು ವಿರೋಧ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಒತ್ತಾಯಿಸಿದರು. ಹೀಗಾಗಿ, ಈ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದರು.
ಅಗತ್ಯಬಿದ್ದರೆ ಕಾಯ್ದೆಗೆ ತಿದ್ದುಪಡಿ ಹಾಗೂ ಹೊಸದಾಗಿ ನಿಯಮಾವಳಿ ರೂಪಿಸಲು ಸಹ ಸಂಪುಟ ಸಭೆ ಒಪ್ಪಿಗೆ ನೀಡಿತು ಎಂದು ಕಾನೂನು ಮತ್ತು ಸಂಸದೀಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಇನ್ನು ಸರ್ಕಾರದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿಗಳಲ್ಲಿಯೂ ಮೀಸಲಾತಿ ನೀತಿಯನ್ನು ಅಳವಡಿಸಿಕೊಳ್ಳಲು ಸಂಪುಟ ನಿರ್ಧರಿಸಿದೆ. ಈ ಸಂಬಂಧ ಸರ್ಕಾರ ರೂಪಿಸಿದ್ದ ಕರ್ನಾಟಕ ಅನುಸೂಚಿತ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ನೇಮಕಾತಿ ವಿಧೇಯಕ 2017ನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ನಿರ್ಧರಿಸಲಾಗಿದೆ.
ಕೆಪಿಎಸ್‌ಸಿ ನೇಮಕಾತಿ ಕುರಿತು ಕಾಲಕಾಲಕ್ಕೆ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಪ್ರಕರಣಕ್ಕೆ ಅನುಗುಣವಾಗಿ ತೀರ್ಪು ನೀಡಿವೆ. 1998, 1999 ಹಾಗೂ 2004ನೇ ಬ್ಯಾಚ್ನ ಗೆಜೆಟೆಡ್ ಪ್ರೊಬೆಷನರಿ ನೇಮಕದ ಕುರಿತು ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, 2016ರ ಜೂ.21ಕ್ಕೆ ತೀರ್ಪು ನೀಡಿತ್ತು. ಈ ಸಂಬಂಧ ಕೆಪಿಎಸ್‌ಸಿ ಕೂಡ 1994ರಲ್ಲಿ (ಡಿಪಿಎಆರ್ 2 ಎಸ್ಬಿಸಿ 94) ನಿಯಮ ಮಾಡಿಕೊಂಡಿತ್ತು. ನೇಮಕದಲ್ಲಿ ಆಗಿನ ಕೆಪಿಎಸ್‌ಸಿ ಅನುಸರಿಸಿದ್ದ ನೇಮಕಾತಿ ಕುರಿತು ಆಕ್ಷೇಪಿಸಿದ್ದ ನ್ಯಾಯಾಲಯ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿಗೆ ಮೀಸಲು ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿದ್ದು ಅಸಾಂವಿಧಾನಿಕ. ಮೀಸಲು ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸಿ ಎಂದು ತಿಳಿಸಿತ್ತು. ಈ ಆದೇಶವನ್ನು 2018ರ ಏ.12ರ ಆದೇಶದಲ್ಲಿ ಸುಪ್ರೀಂಕೋರ್ಟ್ ಎತ್ತಿ ಹಿಡಿದಿತ್ತು.
2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪಾಲಿಸುವ ಬಗ್ಗೆ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವ ಮಾನದಂಡ ಅನುಸರಿಸಬೇಕು ಎಂಬ ಸ್ಪಷ್ಟನೆ ಕೋರಿ ಅಕ್ಟೋಬರ್ನಲ್ಲಿ ಕೆಪಿಎಸ್‌ಸಿ ಕಾರ್ಯದರ್ಶಿ ಆರ್.ಆರ್. ಜನ್ನು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿದ್ದರು. ಈ ಕುರಿತು ನ.3ಕ್ಕೆ ಪ್ರತಿಕ್ರಿಯೆ ನೀಡಿದ್ದ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ತಿಳಿಸಿತ್ತು.
ಇದೀಗ ಈ ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿರುವ ಸರ್ಕಾರ ಹಳೇ ನಿಯಮವನ್ನೇ ಮುಂದುವರಿಸಲು ನಿರ್ಧರಿಸಿದೆ.