ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣ ಬೈರೇಗೌಡ ಆಯ್ಕೆ
ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಭೆಯಲ್ಲಿ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು: ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನವಾಗಿದ್ದು, ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಸೋಮವಾರ ಘೋಷಿಸಿದೆ.
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷವು ಕಾಂಗ್ರೆಸ್ಗೆ ಬಿಟ್ಟುಕೊಟ್ಟ ಬೆನ್ನಲ್ಲೇ ಸಭೆ ನಡೆಸಿ ಅಳೆದು ತೂಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಕಾಂಗ್ರೆಸ್ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೀರ್ಮಾನಿಸಿದೆ. ಸಚಿವ ಕೃಷ್ಣ ಬೈರೇಗೌಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಸೋಮವಾರ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ, ಗೆಲುವಿನ ಮಾನದಂಡ ಹಾಗೂ ಜಾತಿ ಲೆಕ್ಕಾಚಾರ ನಡೆಸಿ ಒಕ್ಕಲಿಗ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಚಿಂತನೆ ನಡೆಸಿದ್ದ ನಾಯಕರು ಕಡೆಗೆ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ತೀರ್ಮಾನಕ್ಕೆ ಬಂದಿದ್ದಾರೆ.
ದೂರವಾಣಿ ಮೂಲಕ ಸಂಪರ್ಕ ಮಾಡಿದಾಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರೂ ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಇನ್ನು ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರನ್ನು ಕಮಲ ಪಾಳಯ ಕಣಕ್ಕಿಳಿಸಿದೆ.