Big Breaking: ನಾಳೆ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದ ಸಂತೋಷ್, ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದರು.
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರ ತಲೆದಂಡವಾಗಿದೆ. ಸಂತೋಷ್ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿರುವ ಆರೋಪಕ್ಕೆ ಗುರಿಯಾಗಿರುವ ಕೆ.ಎಸ್.ಈಶ್ವರಪ್ಪನವರು ನಾಳೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಹಲವಾರು ಕಾಮಗಾರಿಗಳ ಬಾಕಿ ಬಿಲ್ ಮೊತ್ತದ ಬಿಡುಗಡೆಗೆ ಶೇ.40ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ತನ್ನ ಸಾವಿಗೆ ಈಶ್ವರಪ್ಪನವರೇ ಕಾರಣವೆಂದು ಡೇತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದರು.
ಇದನ್ನೂ ಓದಿ: ‘ಸಾವಿನ ಮನೆಯಲ್ಲಿ ರಾಜಕಾರಣ ನಡೆಸುವ ರಣಹದ್ದುಗಳು ಬೀದಿಗೆ ಇಳಿದಿವೆ!’
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದ ಸಂತೋಷ್, ಈಶ್ವರಪ್ಪ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು.
ಇದೀಗ ಕೊನೆಗೂ ಈಶ್ವರಪ್ಪನವರು ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣದಿಂದಾಗಿ ಪಕ್ಷಕ್ಕೆ ನನ್ನಿಂದ ಇರಿಸುಮುರಿಸು ಆಗುವುದು ಬೇಡ. ನನ್ನ ಮೇಲೆ ನನಗೆ ನಂಬಿಕೆ ಇದೆ. ತನಿಖೆ ಮುಗಿದು ಸತ್ಯಾಂಶ ಹೊರಬರಲಿ, ನಾನು ಎಲ್ಲವನ್ನೂ ಎದುರಿಸಲು ಸಿದ್ಧನಿದ್ದೇನೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ: 'ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್‌ನಿಂದ ದಲಿತ ಸಿಎಂ ಮಾಡುವೆ’
ಸಂತೋಷ್ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ವರದಿ ಬಂದ ಬಳಿಕವಷ್ಟೇ ಮುಂದಿನ ಕ್ರಮ ಜರುಗಿಸಲಾಗುವುದು. ಅಲ್ಲಿವರೆಗೂ ಯಾವುದೇ ಕ್ರಮವಿಲ್ಲವೆಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.