ಮೈಸೂರು ದಸರಾಗೆ ಕೆಎಸ್ಆರ್ಟಿಸಿಯಿಂದ 2500 ವಿಶೇಷ ಬಸ್ ಸೌಲಭ್ಯ
ಮೈಸೂರು ದಸರಾ ವೀಕ್ಷಿಸಲು ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ರಜಾ ದಿನಗಳಲ್ಲಿ ತಮ್ಮ ಊರುಗಳಿಗೆ ತೆರಳುವ ಜನರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೆಚ್ಚುವರಿ 2500 ವಿಶೇಷ ಬಸ್ಸುಗಳ ಸೌಲಭ್ಯ ಒದಗಿಸಲು ನಿರ್ಧರಿಸಿದೆ.
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ವೀಕ್ಷಿಸಲು ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ರಜಾ ದಿನಗಳಲ್ಲಿ ತಮ್ಮ ಊರುಗಳಿಗೆ ತೆರಳುವ ಜನರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೆಚ್ಚುವರಿ 2500 ವಿಶೇಷ ಬಸ್ಸುಗಳ ಸೌಲಭ್ಯ ಒದಗಿಸಲು ನಿರ್ಧರಿಸಿದೆ.
ರಾಜ್ಯಾದ್ಯಂತ ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವ ವೇಗದೂತ, ರಾಜಹಂಸ, ಐರಾವತ ಹಾಗೂ ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಸಾರಿಗೆ ಸೇವೆಗಳ ಜೊತೆಗೆ ಅಕ್ಟೋಬರ್ 4 ರಿಂದ ಅಕ್ಟೋಬರ್ 8ರವರೆಗೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಹಾಗೂ ಅಕ್ಟೋಬರ್ 9 ರಿಂದ ವಿವಿಧ ಜಿಲ್ಲೆಗಳು ಮತ್ತು ಅಂತರ ರಾಜ್ಯದಿಂದ ಬೆಂಗಳೂರಿಗೆ ವಿಶೇಷ ಬಸ್ಸುಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಯಾವ ಸ್ಥಳಗಳಿಗೆ ವಿಶೇಷ ಬಸ್ಸುಗಳು ಸಂಚರಿಸಲಿವೆ?
ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.
ಮೈಸೂರು ದಸರಾ ಪ್ರಯುಕ್ತ 350 ವಿಶೇಷ ಬಸ್
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 175 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 175 ವಾಹನಗಳು ಸೇರಿ ಒಟ್ಟಾರೆ 350 ದಸರಾ ವಿಶೇಷ ವಾಹನಗಳು ಸಂಚಾರ ನಡೆಸಲಿವೆ.
ವಿಮಾನ ನಿಲ್ದಾಣದಿಂದ ನೇರ ಬಸ್ ಸೌಲಭ್ಯ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಮೊಬೈಲ್ ಮೂಲಕ ಎಂ-ಬುಕಿಂಗ್ ಹಾಗೂ ಇ-ಟಿಕೆಟ್ ಬುಕಿಂಗ್‍ನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದು. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ksrtc ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರವನ್ನೂ ಸಹ ಪ್ರತ್ಯೇಕವಾಗಿ ತೆರೆಯಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು 708 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‍ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇ.5 ರಿಯಾಯಿತಿ!
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದರೆ, ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಪಯಾನಿಕರು ಗಮನಿಸುವಂತೆ ಕೆಎಸ್‌ಆರ್‌ಟಿಸಿ ತಿಳಿಸಿದೆ.