ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಗಣೇಶ ವಿಸರ್ಜನೆ ಮಾಡಲು ಅವಕಾಶವಿಲ್ಲ. ಹಿಂದೂಗಳು ಜೈ ಶ್ರೀರಾಮ್ ಎನ್ನುವಂತಿಲ್ಲ. ಹಿಂದೂಗಳಿಗೆ ಭದ್ರತೆ ಇಲ್ಲ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಜ್ಯದಲ್ಲಿ ಬಾಂಬ್ ಸ್ಪೋಟವಾಗಿದೆ. ಪಾಕಿಸ್ತಾನಕ್ಕೆ ಜೈಕಾರ ಹಾಕಲಾಗಿದೆ. ಲವ್ ಜಿಹಾದ್‌ನಿಂದ ಹಿಂದೂ ಯುವತಿಯರು ಸಾಯುತ್ತಿದ್ದಾರೆ. ಈಗ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಕಳೆದ ತಿಂಗಳು ಜಿಲ್ಲೆಗೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌, ಗೆಜೆಟ್ ಆಗಿರುವ ಆಸ್ತಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲು ಮೌಖಿಕ ಆದೇಶ ಮಾಡಿದ್ದಾರೆ. ಈ ಮೂಲಕ ಸರ್ಕಾರದಿಂದಲೇ ಅಧಿಕೃತವಾಗಿ ಒತ್ತುವರಿ ನಡೆಯುತ್ತಿದೆ. ಈ ಹಿಂದೆ ಟಿಪ್ಪು ಸುಲ್ತಾನ್, ಔರಂಗಜೇಬನಂತಹ ಕೋಮು ಮತಾಂಧರು ಹಿಂದೂಗಳ ಭೂಮಿ, ಉದ್ಯೋಗ, ಬದುಕು ಕಿತ್ತುಕೊಂಡು ಮತಾಂತರ ಮಾಡಿದ್ದರು. ಈಗ ರೈತರ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಅವರು ದೂರಿದ್ದಾರೆ.  


ಇದನ್ನೂ ಓದಿ: ಶಬರಿಮಲೆ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್; ವಿಮಾನದಲ್ಲಿ ತೆಂಗಿನಕಾಯಿ ಸಾಗಿಸಲು ಅನುಮತಿ!


ಸಚಿವ ಜಮೀರ್ ಅಹ್ಮದ್‌, ಆಧುನಿಕ ಟಿಪ್ಪು ಸುಲ್ತಾನ್ ಆಗಲು  ಹೊರಟಿದ್ದಾರೆ. ಈ ರೀತಿಯಾದರೂ ಭೂಮಿ ಕಸಿದು, ಸಿಎಂ‌ ಆಗುವ ಯೋಜನೆ ರೂಪಿಸಲಾಗಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಮುಡಾ ನಿವೇಶನ ಲೂಟಿ ಮಾಡುತ್ತಾರೆ. ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸಿಎ ನಿವೇಶನ ಲೂಟಿ ಮಾಡುತ್ತದೆ. ಈಗ ಜಮೀರ್ ಅಹಮದ್ ಕೂಡ ಈ ಪಟ್ಟಿಗೆ ಸೇರಿ ಭೂಮಿ ಕೊಳ್ಳೆ ಹೊಡೆದು ವಕ್ಫ್‌ಗೆ ಸೇರಿಸಲು ತಂತ್ರ ಮಾಡಿದ್ದಾರೆ. ವಕ್ಫ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


ಕೇಂದ್ರದ ಉದ್ದೇಶಿತ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಕ್ಫ್ ಬೋರ್ಡ್ ವಿರೋಧ ವ್ಯಕ್ತಪಡಿಸಿದೆ. ವಕ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ, ಎಲ್ಲ ವಕ್ಫ್ ಬೋರ್ಡ್‌ಗಳಿಂದ ಮಾಹಿತಿ ಕೇಳಿದೆ. ಆದರೆ ಕರ್ನಾಟಕದ ವಕ್ಫ್ ಬೋರ್ಡ್ ಇದನ್ನು ವಿರೋಧಿಸಿದೆ. ನಾವು ಮಾಹಿತಿ ಕೊಡಲ್ಲ, ನಮ್ಮದು ಸ್ವಾಯತ್ತ ಸಂಸ್ಥೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಳೆಯ ಎಲ್ಲ ನಿಯಮ, ಕಾನೂನುಗಳಿಗೆ ಮೋದಿ ಸರ್ಕಾರ ಬದಲಾವಣೆ ತರಲಿದೆ. ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ‌ ಕಬಳಿಸಬೇಕು ಎಂಬುದು ಇವರ ಉದ್ದೇಶ ಎಂದು ಆರ್‌.ಅಶೋಕ ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಪ್ರಲ್ಹಾದ ಜೋಶಿ ಸುಪ್ರೀಂ ತೀರ್ಪು ಪಾಲಿಸಬೇಡಿ ಎಂದು ಕೇಂದ್ರದಿಂದ ಆದೇಶ ಹೊರಡಿಸಲಿ - ಈಶ್ವರ ಖಂಡ್ರೆ ಸವಾಲು


ಕಾಂಗ್ರೆಸ್ ಸರ್ಕಾರ ಭೂಮಿ ಕಬಳಿಕೆ ಮಾಡಿಕೊಡುವ ಬದಲು, ಕೇಂದ್ರ ಸರ್ಕಾರದ ಜಂಟಿ ಸಲಹಾ ಸಮಿತಿ ಜೊತೆ ಚರ್ಚೆ ಮಾಡಲಿ. ಅದು ಬಿಟ್ಟು ಸ್ವತಂತ್ರವಾಗಿ ಕ್ರಮ ಕೈಗೊಳ್ಳುವ ಅಧಿಕಾರ ಯಾರಿಗೂ ಇಲ್ಲ. ವಿಜಯಪುರ ಜಿಲ್ಲೆಯಲ್ಲಿ ದೇವಸ್ಥಾನ, ಗುಡಿಗಳು ಕೂಡ ಇದೆ. ಅವೆಲ್ಲಕ್ಕೂ ಎಷ್ಟು ನೋಟಿಸ್ ನೀಡಲಾಗಿದೆ ಎಂದು ಸರ್ಕಾರ ತಿಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಬೇಕು. ಇದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇತ್ತೇ ಎಂದು ತಿಳಿಸಬೇಕು. ಈಗ ರೈತರು ಕಂಗಾಲಾಗಿದ್ದಾರೆ. ಹಿಂದೂಗಳಿಗೆ ಭಯ ಶುರುವಾಗಿದೆ. ಈ ಸಮಯದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಂಡು ಜನರಿಗೆ ಸೂಕ್ತ ಮಾಹಿತಿ ಹಾಗೂ ಸ್ಪಷ್ಟೀಕರಣ ‌ನೀಡಬೇಕು ಎಂದು ಆರ್‌.ಅಶೋಕ ಒತ್ತಾಯಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.