ಯಡಿಯೂರಪ್ಪ ಸಂಪುಟದಲ್ಲಿ ಘಟಾನುಘಟಿಗಳಿಗೆ ಸಿಗದ ಅವಕಾಶ
ಸಚಿವ ಸ್ಥಾನ ಸಿಗದ ನಾಯಕರು ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿಲ್ಲವಾದರೂ, ಅವರ ಬೆಂಬಲಿಗರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಕೊನೆಗೂ ಸಂಪುಟ ರಚನೆ ಮಾಡಿದೆ. ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಹೊತ್ತಿದ್ದ ಹಲವು ಘಟಾನುಘಟಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲ.
ಯಡಿಯೂರಪ್ಪ ಸಂಪುಟದಲ್ಲಿ ದತ್ತಾತ್ರೇಯ ಪಾಟೀಲ್ ರೇವೂರ್, ರೇಣುಕಾಚಾರ್ಯ, ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ, ರಾಜುಗೌಡ, ಎಸ್. ಎ. ರಾಮದಾಸ್ ಸೇರಿದಂತೆ ಹಲವು ನಾಯಕರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತಾದರೂ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ ಬೇರೆಯೇ ಆಗಿದೆ.
ಸಚಿವ ಸ್ಥಾನ ಸಿಗದ ನಾಯಕರು ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿಲ್ಲವಾದರೂ, ಅವರ ಬೆಂಬಲಿಗರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನ ಕೈ ತಪ್ಪಿದ ಕುರಿತು ಪ್ರತಿಕ್ರಿಯೆ ನೀಡಿರುವ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್. ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು, ಆದರೆ ಸಿಕ್ಕಿಲ್ಲ. ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಬೇಸರವೇನೂ ಇಲ್ಲ. ಮುಂದಿನ ಬಾರಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿದೆ. ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.