ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಒದಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಭರವಸೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಧ ಗುರು ಪತ್ನಿ ಕಲಾವತಿ ಅವರಿಗೆ ಸಕ್ರಾರಿ ಉದ್ಯೋಗದ ಜೊತೆಗೆ ಆರ್ಥಿಕ ನೆರವು ಒದಗಿಸಲಾಗುವುದು. ಈಗಾಗಲೇ ಯೋಧನ ಕುಟುಂಬಕ್ಕೆ ಜಿಲ್ಲಾಡಳಿತ ನೆರವು ಘೋಷಿಸಿದೆ. ಮದ್ದೂರಿನ ಗುಡಿಗೆರೆ ಗ್ರಾಮದ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಗಳು ಸ್ಥಳದಲ್ಲೇ ಇದ್ದು, ಎಲ್ಲಾ ವ್ಯವಸ್ಥೆ ಮಾಡಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.


ಇದಕ್ಕೂ ಮುನ್ನ ಹುತಾತ್ಮ ಯೋಧ ಗುರು ಕುಟುಂಬದೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು. ಅಲ್ಲದೆ, ಅಂತ್ಯಸಂಸ್ಕಾರಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿಯೂ, ಪರಿಹಾರ ನೀಡಿಕೆ ಸಂಬಂಧ ಚರ್ಚಿಸುವುದಾಗಿಯೂ ಭರವಸೆ ನೀಡಿದ್ದರು.