ಬೆಂಗಳೂರು: ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ಸಂಬಂಧ ನಷ್ಟದ ಅಂದಾಜು ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ (ST Somashekhar) ತಿಳಿಸಿದರು.
ರೈತರು (Farmers) ತಾವು ಬೆಳೆದ ತೋಟಗಾರಿಕಾ ಉತ್ಪನ್ನಗಳನ್ನು ನಗರಗಳಿಗೆ ತಂದು ಮುಕ್ತವಾಗಿ ಮಾರಾಟ ಮಾಡಲು ಯಾವುದೇ ಅಡೆತಡೆಗಳು ಇಲ್ಲ. ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಬದ್ಧ ಎಂದು ಸಚಿವರು ತಿಳಿಸಿದರು.
ದಿನಸಿ, ತರಕಾರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ ಕ್ರಮ ವಹಿಸಿ: ಸಚಿವ ಎಸ್.ಟಿ. ಸೋಮಶೇಖರ್
ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ. ನಮ್ಮ ಪ್ರಧಾನಮಂತ್ರಿಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ವಿರೋಧ ಪಕ್ಷಗಳ ಸಲಹೆ- ಸೂಚನೆಗಳನ್ನು ಪರಿಗಣಿಸಿ ಕಾರ್ಯನಿರ್ವಹಿಸುತ್ತಿರುವುದನ್ನು ಇಡೀ ದೇಶದ ಜನತೆ ಪ್ರಶಂಸಿಸುತ್ತಿದ್ದಾರೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕರ್ನಾಟಕ ರಾಜ್ಯದಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಕೊರೋನಾ ನಿಯಂತ್ರಣಕ್ಕಾಗಿ ಹತ್ತು ಹಲವು ಬಿಗಿ ನಿಲುವುಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಸರ್ಕಾರದ ಜೊತೆ ಕೈಜೋಡಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಜಿಲ್ಲಾಡಾಳಿತ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲಾಡಾಳಿತ 24/7 ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಔಷಧಿ - ಮಾತ್ರೆಗಳು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮೆಡಿಕಲ್ ಶಾಪ್ ಗಳಿಗೆ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಬಹುಮುಖ್ಯವಾಗಿ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದೆಂದು ಮೈಸೂರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.