ಸಮ್ಮಿಶ್ರ ಸರ್ಕಾರ ಉರುಳಿಸಲು ಮೋದಿ, ಅಮಿತ್ ಷಾ ತಂತ್ರ: ಸಿದ್ದರಾಮಯ್ಯ
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಕೈವಾಡವಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರು: ಇಬ್ಬರು ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸುವಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ನಗರದಲ್ಲಿಂದು ನಡೆದ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ಜತೆ ಮಾತನಾಡಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸುತ್ತೇನೆ. ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿ ನಡೆಸುತ್ತಿರುವ ಪ್ರಯತ್ನವೂ ಕೈಗೂಡುವುದಿಲ್ಲ" ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಜಿನಾಮೆ ನೀಡಿರುವ ಶಾಸಕ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಅವರಿಗೆ ಕೆಲವು ಅಸಮಾಧಾನ ಆಗಿರಬಹುದು. ಅದನ್ನು ಮಾತುಕತೆ ಮೂಲಕ ಬಗೆಹರಿಸುತ್ತೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.