ಬೆಂಗಳೂರು: ರಾಜ್ಯ ಸರ್ಕಾರ ಪ್ರವಾಹ ಪರಿಹಾರಕ್ಕಾಗಿ ಸಲ್ಲಿಸಿದ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂಬ ವರದಿ ಬೆನ್ನಲ್ಲೇ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಸನ್ಮಾನ್ಯ ಬಿಎಸ್ ಯಡಿಯೂರಪ್ಪನವರೇ, ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತೀರಿ? ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ‌ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ" ಎಂದಿದ್ದಾರೆ. 

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ಪ್ರವಾಹ ಪರಿಹಾರ ಕೊಡಲು ರಾಜ್ಯದ ಬಳಿ ಹಣವಿಲ್ಲ. ಬೊಕ್ಕಸ ಖಾಲಿಯಾಗಿದೆ ಎಂದು ಹೇಳಿಕೆ ನೀಡಿದ್ದರು. 


ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರೇ ತಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ಕ್ಷಣದಿಂದ ನಿಮಗೆ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆಯಿಲ್ಲ. ರಾಜಿನಾಮೆ ಕೊಟ್ಟು ಹೊರಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಎಂದೂ ಶಿಕ್ಷಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.