ಮೈಸೂರು: ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಖಚಿತ ಎಂದು  ಡಾ.ಯತೀಂದ್ರ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಆದರೆ ಅವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷ ಇದುವರೆಗೂ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಭಾರೀ ಗೊಂದಲ ಹುಟ್ಟುಹಾಕಿದೆ. ಆದರೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ತಮ್ಮ ತಂದೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದು ಖಚಿತ ಎಂದು ಸ್ಪಷ್ಟಪಡಿಸಿದರು.


ಅಲ್ಲದೆ, ತಾವು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, "ತಾವೇನೂ ಟಿಕೆಟ್ ಕೇಳಿ ಅರ್ಜಿ ಹಾಕಿಕೊಂಡಿಲ್ಲ. ಆದರೆ ಟಿಕೆಟ್ ದೊರೆಯುವುಯು ಖಚಿತ, ನನ್ನ ಸ್ವಂತ ಸಾಮರ್ಥ್ಯದಿಂದ ವರುಣಾ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇನೆ. ನಮ್ಮ ತ್ನದೆ ಕೂಡ ಈ ಕ್ಷೇತ್ರದಲ್ಲಿ ಎರಡು ದಿನ ಪ್ರಚಾರ ಮಾಡಲಿದ್ದಾರೆ" ಎಂದು ಯತಿಂದ್ರ ಹೇಳಿದರು.


ಈಗಾಗಲೇ ಕಳೆದ 4 ದಿನಗಳಿಂದ ನವದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿದ್ದು, ಇಂದೂ ಕೂಡ ಮುಂದುವರೆದಿದೆ. ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಒಂದೇ ಸಾರಿ ಬಿಡುಗಡೆ ಮಾಡುವುದಾಗಿ ಹೇಳಿದ್ದು, ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.