ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಚಿವ ಸಾರಾ ಮಹೇಶ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಭಾರೀ ಅಂತರದಿಂದ ಗೆಲ್ಲುತ್ತಾರೆ ಎಂದು ಹಲವರು ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ನಿಖಿಲ್ ಗೆಲುವು ಖಚಿತ. ಆದರೆ ಮತಗಳ ಅಂತರ ಕಡಿಮೆಯಾಗುವ ಸಾಧ್ಯತೆಯಿದೆ. ಸುಮಾರು 1 ರಿಂದ 1.5 ಲಕ್ಷ ಮತಗಳ ಅಂತರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ನಿರೀಕ್ಷೆಯಿದೆ ಎಂದು ಸಾರಾ ಮಹೇಶ್ ಹೇಳಿದ್ದಾರೆ.


ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಕಷ್ಟು ಜನಪರ, ರೈತಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ ಮಂಡ್ಯ ಜನತೆ ನಿಖಿಲ್ ಕೈಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ. ಈ ಎಲ್ಲಾ ಕುತೂಹಲಗಳಿಗೆ ಮೇ 23ರಂದು ಹೊರಬೀಳುವ ಲೋಕಸಭಾ ಚುನಾವಣೆ ಫಲಿತಾಂಶ ಉತ್ತರ ನೀಡಲಿದೆ ಎಂದರು.


ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಇವರಿಗೆ ಎದುರಾಳಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಿದ್ದು, ಬಿಜೆಪಿ ಇವರಿಗೆ ಬೆಂಬಲ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಈ ಇಬ್ಬರಲ್ಲಿ ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎಂಬುದನ್ನು ಕಾದುನೋಡಬೇಕಿದೆ.