ಹುಬ್ಬಳ್ಳಿ: ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಕಡೆಗಣಿಸಿದ್ದನ್ನು ವಿರೋಧಿಸಿ ಇಂದು ನಡೆಸಲು ಉದ್ದೇಶಿಸಿದ್ದ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 


COMMERCIAL BREAK
SCROLL TO CONTINUE READING

ಉತ್ತರ ಕರ್ನಾಟಕ ವಿಚಾರದಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂದು ಬಂದ್‌ಗೆ ಕರೆ ನೀಡಲಾಗಿದೆಯಾದರೂ,  ಹೈದರಾಬಾದ್‌ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಬಂದ್​ಗೆ ಬೆಂಬಲ ವ್ಯಕ್ತವಾಗಿಲ್ಲ. ಈ ಮಧ್ಯೆ, ಕಲಬುರಗಿ ಹಾಗೂ ಯಾದಗಿರಿಯಲ್ಲಿ ಬಂದ್ ಅನ್ನು ವಿರೋಧಿಸಲಾಗಿದೆ. 


ಉತ್ತರ ಕರ್ನಾಟಕದ ಹುಬ್ಬಳ್ಳಿ- ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಪ್ರಮುಖ ಸಂಘಟನೆಗಳು ಬಂದ್​ನಿಂದ ದೂರ ಸರಿದಿವೆ. ಆದರೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಈ ಯಾವ ಜಿಲ್ಲೆಗಳಲ್ಲೂ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆ ಭಾಗದ ಜಿಲ್ಲೆಗಳಲ್ಲಿ ಜನಜೀವನ ಎಂದಿನಂತೆ ಮುಂದುವರೆದಿದೆ.


ಬಂದ್​ಗೆ ಕರೆ ನೀಡಿದ್ದ ಸಂಘಟನೆಗಳ ನಡುವೆಯೇ ಒಡಕು ಕಾಣಿಸಿಕೊಂಡಿದ್ದು, 13 ಜಿಲ್ಲೆಗಳಲ್ಲಿ ಹೋರಾಟ ನಡೆಸುವ ತೀರ್ಮಾನ ಬೆಂಬಲಿಸಿದ್ದ ಬಹುತೇಕ ಸಂಘಟನೆಗಳು ಬಂದ್​ಗೆ ಬೆಂಬಲಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದವು. ಆ ಮೂಲಕ ನಮ್ಮ ಬೆಂಬಲ ಉತ್ತರ ಕರ್ನಾಟಕ ಅಭಿವೃದ್ಧಿಯ ಹೋರಾಟಕ್ಕೇ ಹೊರತು ಪ್ರತ್ಯೇಕ ರಾಜ್ಯಕ್ಕಲ್ಲ ಎಂಬ ಸಂದೇಶ ರವಾನಿಸಿದ್ದರು. ಹದಿನೈದು ದಿನಗಳ ಒಳಗಾಗಿ ಸಭೆ ಕರೆದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚಿಸುವುದಾಗಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬುಧವಾರ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಮಾತನಾಡಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬರಿ ಗುರುವಾರ ಕರೆ ನೀಡಿದ್ದ ಬಂದ್ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದರು.


ಆದರೆ, ಯಾವುದೇ ಕಾರಣಕ್ಕೂ ಬಂದ್ ಹಿಂಪಡೆಯುವುದಿಲ್ಲ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಸವರಾಜ ಕರಿಗಾರ ಹುಬ್ಬಳ್ಳಿಯಲ್ಲಿ ಬುಧವಾರ  ಸ್ಪಷ್ಟಪಡಿಸಿದ್ದರು. ಇವರಿಗೆ ಕೈ ಜೋಡಿಸಿದ್ದ ಇನ್ನೂ ಕೆಲ ಸಂಘಟನೆಗಳು ಕೂಡ ಸಿಎಂ ಏನೇ ಭರವಸೆ ನೀಡಿದರೂ ಬಂದ್ ಕರೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದವು. 


ಮತ್ತೆ ಕೆಲವು ಸಂಘಟನೆಗಳು ಬಂದ್ ಬದಲು ಸಾಂಕೇತಿಕವಾಗಿ ಧರಣಿ ನಡೆಸಿ ಉತ್ತರ ಕರ್ನಾಟಕಕ್ಕಾಗಿರುವ ಅನ್ಯಾಯ ಸರಿಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಹೇಳಿವೆ.