ಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಸಂಪುಟ ಸೇರ್ಪಡೆಗೆ ವಿರೋಧ
ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದು ಅವರಿಗೆ ಸಚಿವ ಸ್ಥಾನ ಅಲಂಕರಿಸುವ ನೈತಿಕತೆ ಇಲ್ಲ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.
ಬೆಂಗಳೂರು : ವಿಧಾನಪರಿಷತ್ ಸದಸ್ಯ ಆರ್.ಬಿ.ತಿಮ್ಮಾಪುರ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದು ಅವರಿಗೆ ಸಚಿವ ಸ್ಥಾನ ಅಲಂಕರಿಸುವ ನೈತಿಕತೆ ಇಲ್ಲ ಎಂದು ಆರೋಪಿಸಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ.
ಆಗಸ್ಟ್ 30ರಂದು ಬಿಬಿಎಂಪಿ ಚುನಾವಣಾ ಆಯೋಗಕ್ಕೆ ಆರ್.ಬಿ.ತಿಮ್ಮಾಪುರ ಸೇರಿದಂತೆ ಒಟ್ಟು 8 ವಿಧಾನಪರಿಷತ್ ಸದಸ್ಯರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವರದಿ ಸಲ್ಲಿಸಿತ್ತು.
ಈ ನಿಟ್ಟಿನಲ್ಲಿ ಆರ್.ಬಿ.ತಿಮ್ಮಾಪುರ ಸಚಿವ ಸ್ಥಾನ ಅಲಂಕರಿಸಲು ಅವಕಾಶ ಮಾಡಿ ಕೊಡದಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ರಾಜ್ಯಪಾಲರಿಗೆ ದೂರು ಸಲ್ಲಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಈಗಾಗಲೇ 8 ವಿಧಾನಪರಿಷತ್ ಸದಸ್ಯರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಬಿಎಂಪಿ ತನ್ನ ಆಂತರಿಕ ವರದಿ ಸಲ್ಲಿಸಿದೆ. ಈ ವರದಿಯ ಪ್ರಕಾರ ಆ 8 ವಿಧಾನಪರಿಷತ್ ಸದಸ್ಯರನ್ನು ಅಮಾನತ್ತುಗೊಳಿಸಬೇಕು. ಜೊತೆಗೆ ಇಂದು ನಡೆಯುವ ಸಂಪುಟ ವಿಸ್ತರಣೆಯಲ್ಲಿ ಆರ್.ಬಿ.ತಿಮ್ಮಾಪುರ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬಾರದೆಂದು ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ರಾಜ್ಯಪಾಲ ವಜುಬಾಯಿ ವಾಲಾ ತಿಳಿಸಿದ್ದಾರೆ ಎಂದು ಶೆಟ್ಟರ್ ಹೇಳಿಕೆ ನೀಡಿದರು.