ಕನ್ನಡ ಭಾಷಾಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧ - ಸಿಎಂ ಸಿದ್ದರಾಮಯ್ಯ
ಮೈಸೂರು : ಭಾಷೆ ಅನ್ನದ ಭಾಷೆಯಾದರೆ ಅದು ಬೆಳೆಯುತ್ತದೆ, ಉಳಿಯುತ್ತದೆ ಎನ್ನುವ ಮಾತಿದೆ. ಆದ್ದರಿಂದ ಕೃಷಿ, ಉದ್ಯಮ, ಉದ್ಯೋಗ, ವಿಜ್ಞಾನ, ತಂತ್ರಜ್ಞಾನ ಹೀಗೆ ಒಟ್ಟು ರಾಜ್ಯದ ಅಭಿವೃದ್ಧಿಯಲ್ಲಿಯೇ ಕನ್ನಡದ ಬೆಳವಣಿಗೆ ಕೂಡಾ ಇದೆ ಎಂದು ನಮ್ಮ ಸರ್ಕಾರ ನಂಬಿದೆ. ಹಾಗಾಗಿ ಕನ್ನಡ ಭಾಷಾಭಿವೃದ್ಧಿಗೆ ನಮ್ಮ ಸರ್ಕಾರ ಕಟಿಬದ್ಧ ಎಂದು ಸಿದ್ದರಾಮಯ್ಯ ನುಡಿದರು.
ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
ನಾವು ಕನ್ನಡದಲ್ಲಿಯೇ ವ್ಯವಹರಿಸುತ್ತೇವೆ, ಕನ್ನಡ ಪತ್ರಿಕೆ ಹಾಗೂ ಪುಸ್ತಕಗಳನ್ನು ಕೊಂಡು ಓದುತ್ತೇವೆ ಮತ್ತು ಇಂತಹ ಕನ್ನಡತನದ ಸಂಸ್ಕೃತಿಯನ್ನು ನಮ್ಮ ಮಕ್ಕಳಲ್ಲಿಯೂ ಬೆಳೆಸುತ್ತೇವೆ ಎಂದು ಪ್ರತಿಯೊಬ್ಬ ಕನ್ನಡಿಗನೂ ಸಂಕಲ್ಪ ಮಾಡಬೇಕು. ಸಾಹಿತ್ಯ ಸಮ್ಮೇಳನಗಳು ಕೇವಲ ಸಾಹಿತ್ಯದ ವಿಷಯಗಳಿಗಷ್ಟೇ ಸೀಮಿತಗೊಳ್ಳದೆ ಕನ್ನಡಿಗರ ಬದುಕಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಈ ಬಾರಿ ಸಮ್ಮೇಳನದಲ್ಲಿ ಚರ್ಚೆಗೆ ಎತ್ತಿಕೊಂಡಿರುವುದು ಸ್ವಾಗತಾರ್ಹ ಎಂದು ಸಿದ್ದರಾಮಯ್ಯ ಶ್ಲಾಘಿಸಿದರು.
''ನನ್ನ ತವರೂರಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಮಾಡುತ್ತಿದ್ದೇನೆ. ಇದು ನನ್ನ ಬದುಕಿನ ಸಾರ್ಥಕ ಕ್ಷಣಗಳಲ್ಲೊಂದು. ಹಾಗೆಯೇ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ. ಚಂದ್ರಶೇಖರ ಪಾಟೀಲ್ ಅವರನ್ನು ಆಯ್ಕೆ ಮಾಡಿರುವುದು ಖುಷಿ ತಂದಿದೆ'' ಎಂದು ನುಡಿದರು.
ಸಾಹಿತ್ಯ ಸಮ್ಮೇಳನದಲ್ಲಿ ಶಿಕ್ಷಣ, ಕೃಷಿ, ದಲಿತರ ವಿಚಾರ, ಮಹಿಳೆಯರ ಸಬಲೀಕರಣ, ಕನ್ನಡ ಸಾಹಿತ್ಯ ಇತಿಹಾಸ ಮತ್ತು ಸಂಶೋಧನೆ, ಸ್ಥಳೀಯ ಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೌನ ಹೀಗೆ ನಾನಾ ವಿಚಾರಗಳ ಕುರಿತು ದಿಗ್ಗಜರು ಚರ್ಚೆಯನ್ನು ನಡೆಯಲಿದ್ದಾರೆ.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಬರಗೂರು ರಾಮಚಂದ್ರಪ್ಪ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನುಬಳಿಗಾರ್ ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.