ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ, ಪೋಲಿಸ್ ಬಿಗಿ ಭದ್ರತೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಬೆಂಗಳೂರು : ನಾಳೆ(ಫೆ.4) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಹಿನ್ನೆಲೆಯಲ್ಲಿ ಪೂರ್ವ ತಯಾರಿ ಭರ್ಜರಿಯಾಗಿ ನಡೆದಿದ್ದು, ಬಿಗಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಧ್ಯಾಹ್ನ ನಗರಕ್ಕೆ ಆಗಮಿಸುತ್ತಿದ್ದು, ಸಂಜೆ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ 90 ದಿನಗಳ ಪರಿವರ್ತನಾ ಯಾತ್ರೆಯಾ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಸಮಾವೇಶಕ್ಕಾಗಿ 20 ಎಲ್ಇಡಿ ಪರದೆಗಳು, ಮೂರು ಹೆಲಿಪ್ಯಾಡ್ ಗಳು ಮತ್ತು ಮಿನಿ ಆರೋಗ್ಯ ಘಟಕವನ್ನು ತೆರೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಸುಮಾರು 8 ಗೇಟ್ ಗಳ ಮೂಲಕ ಜನರನ್ನು ಒಳಬಿಡುವ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಇನ್ನುಳಿದಂತೆ, ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರಿಗಾಗಿ 250 ಕೌಂಟರ್ಗಳಲ್ಲಿ ಉಪಹಾರ ಮತ್ತು ಭೋಜನವನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿದ್ದು, 4 ಅಡುಗೆ ಮನೆಗಳಲ್ಲಿ 600 ಜನ ಭೋಜನ ತಯಾರಿಸಲಿದ್ದಾರೆ.ಅಲ್ಲದೆ, ಸಮಾವೇಶ ಸ್ಥಳದಲ್ಲಿ ನೀರಿನ ವ್ಯವಸ್ಥೆ ಮತ್ತು ಸೌಚಾಲಯ ವ್ಯವಸ್ಥೆಗಳನ್ನು ಒದಗಿಸಲು ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.