ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

Cauvery water dispute: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲವೆಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Sep 26, 2023, 05:48 PM IST
  • ಕಾವೇರಿ ನದಿ ನೀರು ಹಂಚಿಕೆ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕು
  • ಬಿಜೆಪಿ-ಜೆಡಿಎಸ್ ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ
  • ಬಿಜೆಪಿಯವರನ್ನು ಮೊದಲು ಚಡ್ಡಿಗಳೆಂದೇ ಕರೆಯಲಾಗುತ್ತಿತ್ತು, ಈಗ ಚಡ್ಡಿ ಹಾಕಿಕೊಂಡು ಪ್ರತಿಭಟಿಸುತ್ತಿದ್ದಾರೆ
ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ title=
ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಸೋಮವಾರ ಬೆಂಗಳೂರು ಬಂದ್‍ಗೆ ಕರೆ ನೀಡಿವೆ. ಸೆ.29ರಂದು ಕರ್ನಾಟಕ ಬಂದ್‍ಗೂ ಕರೆ ನೀಡಲಾಗಿದೆ. ಇದೆಲ್ಲದವರ ಮಧ್ಯೆಯೇ ಕಾವೇರಿ ನದಿ ನೀರಿನ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೊಂದು ಶಾಕ್ ಉಂಟಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಈ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ಸ್ವಂತ ಲಾಭಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಅಲ್ಲ. ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ  ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.

‘ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ. ಬಿಜೆಪಿಯವರನ್ನು ಮೊದಲು ಚಡ್ಡಿಗಳು ಎಂದೇ ಕರೆಯಲಾಗುತ್ತಿತ್ತು, ಈಗ ಚಡ್ಡಿ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆ ನಮ್ಮ ತಕರಾರಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ನೆಲ, ಜಲ, ಭಾಷೆಯ ವಿಷಯವನ್ನು ರಾಜಕಾರಣ ಮಾಡಬಾರದು’ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಮುಂದುವರೆದ ಅನ್ನದಾತರ ಆಕ್ರೋಶ

‘ರಾಜ್ಯ ಕಾಂಗ್ರೆಸ್ ಸರ್ಕಾರ ಡಿಎಂಕೆ 'ಬಿ ಟೀಮ್' ಎಂಬ ಬಿಜೆಪಿ ಆರೋಪ ರಾಜಕೀಯಪ್ರೇರಿತವಾದುದ್ದು. ಡಿಎಂಕೆ ತಮಿಳುನಾಡಿನವರು. ಬಿಜೆಪಿ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಅವರನ್ನು ಏನೆಂದು ಹೇಳಬೇಕು? ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿಗಳಿಗೆ ಪತ್ರ ಬರೆದಿರುವುದು ಸಂತೋಷದ ವಿಷಯ. ಅದನ್ನು ನಾನು ಸ್ವಾಗತಿಸಿದ್ದೇನೆ. ಆದರೆ ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ಸುಳ್ಳು. ರಾಜ್ಯ ಸರ್ಕಾರ ಈ ರಾಜ್ಯದ ರೈತರ ಹಾಗೂ ರಾಜ್ಯದ ಹಿತರಕ್ಷಣೆಗೆ ಯಾವತ್ತೂ ಹಿಂದೆ ಬಿದ್ದಿಲ್ಲ, ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯವಲ್ಲ. ರಾಜ್ಯದ ಜನರ ಹಿತ ಮುಖ್ಯ. ಇದರಲ್ಲಿ ನಾವು ಬಲವಾದ ನಂಬಿಕೆ ಇಟ್ಟುಕೊಂಡಿರುವವರು. ಜನರು ಬಂದ್ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ ಆದರೆ ಬಂದ್, ಮೆರವಣಿಗೆ, ಪ್ರತಿಭಟನೆ ಮಾಡಬಾರದು ಎಂದು ಸರ್ವೋಚ್ಛ ನ್ಯಾಯಾಲಯ ಆದೇಶ ಮಾಡಿದೆ. ಪ್ರತಿಭಟನೆ ಮಾಡುವವರು ಇದನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಿದ್ದಾರೆ.

‘ಕಾವೇರಿ ನೀರು ನಿಯಂತ್ರಣ ಮಂಡಳಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಮುಂದೆ ಸಂಕಷ್ಟಸೂತ್ರ ರೂಪಿಸಲು ನಾವು ಒತ್ತಡ ಹೇರುತ್ತಿದ್ದೇವೆ. ಏಕೆಂದರೆ ಮಳೆ ಕೈಕೊಟ್ಟ ಸಂದರ್ಭದಲ್ಲಿ ಎರಡೂ ಕಡೆ ಸಂಕಷ್ಟ ಶುರುವಾಗುತ್ತದೆ. ಅಂಥ ಸಂದರ್ಭದಲ್ಲಿ ನಾವು ಸಂಕಷ್ಟ ಹಂಚಿಕೊಳ್ಳಬೇಕು. ಇಂತಹ ಸನ್ನಿವೇಶದಲ್ಲಿ ನೀರು ಹಂಚಿಕೆಯ ವಿಚಾರದಲ್ಲಿ ಸಂಕಷ್ಟ ಸೂತ್ರವಿರಬೇಕು. ಮತ್ತೊಂದು ಪರಿಹಾರವೆಂದರೆ ಮೇಕೆದಾಟು ಯೋಜನೆ ಅನುಷ್ಠಾನ. ಈ ಜಲಾಶಯವಿದ್ದಿದ್ದರೆ 67 ಟಿಎಂಸಿ ನೀರು ಇರುತ್ತಿದ್ದು, ಅಲ್ಲಿ ನೀರಿದ್ದರೆ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತಿತ್ತು. ಈ ಜಲಾಶಯದಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೆ ಅನುಕೂಲವಾಗುತ್ತಿತ್ತು’ ಎಂದು ಅವರು ತಿಳಿಸಿದ್ದಾರೆ.

‘ಕೇಂದ್ರದ ತಜ್ಞರು ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆಯನ್ನು ವಾಸ್ತವವಾಗಿ ಪರಿಶೀಲಿಸುವ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಜನತಾದಳದ ವರಿಷ್ಠರಾದ ದೇವೇಗೌಡರು ಈ ಬಗ್ಗೆ ಭೇಟಿಯಾಗಿದ್ದು, ಕೇಂದ್ರದೊಂದಿಗೆ ಅವರ ಹೊಸ ಸ್ನೇಹದಿಂದ ಪರಿಹಾರ ದೊರೆಯಬಹುದೇ ನೋಡಬೇಕಿದೆ. ರಾಜ್ಯ ಸರ್ಕಾರ ಪರಿಹಾರ ಸೂತ್ರ ಕೋರಿ ಬರೆದಿರುವ ಪತ್ರಕ್ಕೆ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಬಿಜೆಪಿಯ 25 ಸಂಸದರು ಪ್ರಧಾನಿಯವರ ಮೇಲೆ ಒತ್ತಡ ಹೇರಿ, ಕಾವೇರಿ ಸಮಸ್ಯೆಗೆ ಪರಿಹಾರ ದೊರಕಿಸಬೇಕು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ಪ್ರತಿಭಟನೆಯಲ್ಲಿ ಊಟ ತಿಂಡಿಯ ವ್ಯವಸ್ಥೆ

‘ಸಾಮಾನ್ಯ ವರ್ಷಗಳಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಪ್ರಮಾಣದ ಬಗ್ಗೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶ ನೀಡಿದೆ. ಆದರೆ ಸಂಕಷ್ಟದ ಸಮಯದಲ್ಲಿ ಆ ರಾಜ್ಯಕ್ಕೆ ನೀರು ಬಿಡುವ ಪ್ರಮಾಣ ತಿಳಿಸುವ ಸಂಕಷ್ಟ ಸೂತ್ರ ಇನ್ನೂ ನಿರ್ಧಾರವಾಗಿಲ್ಲ. ಇಂತಹ ಸಂದರ್ಭದಲ್ಲಿ ಒಂದು ಸೌಹಾರ್ದ ಇತ್ಯರ್ಥಕ್ಕೆ ಬರುವುದೇ ಉತ್ತಮ. ಆದ್ದರಿಂದ ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕು. ಕಾವೇರಿ ವಿಷಯದ ವಾದಮಂಡನೆಗೆ ಮೊದಲಿನಿಂದಲೂ ಇರುವ ಕಾನೂನೂ ತಂಡವೇ ಈಗಲೂ ಇದ್ದು, ಎಲ್ಲಾ ಪಕ್ಷದ ಸರ್ಕಾರದ ಅವಧಿಯಲ್ಲಿ ಇದ್ದ ತಂಡವೇ ಆಗಿದೆ’ ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News