ಬೆಂಗಳೂರು: ಇಂದು ಬೆಳಿಗ್ಗೆ ಮಣಿಪಾಲದ ಕೆಎಂವಿ ಆಸ್ಪತ್ರೆಯಲ್ಲಿ ವಿಧಿವಶರಾದ ಉಡುಪಿಯ ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಶ್ರೀಗಳ ಸಾವಿನ ಬಗ್ಗೆ ಶಂಕೆ ವ್ಯಕ್ತವಾದರೆ ತನಿಖೆಗೆ ಆದೇಶಿಸುವುದಾಗಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಶ್ರೀಗಳ ಅಕಾಲಿಕ ನಿಧನದಿಂದಾಗಿ ಕ್ಷೇತ್ರದಲ್ಲಿ ಅಪಾರ ನಷ್ಟವಾಗಿದೆ. ಅವರ ಸಾವಿನ ತನಿಖೆ ಅನಿವಾರ್ಯವಾದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಮಾತಂಡಿದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಸ್ವಾಮಿಜಿಯವರ ಸಾವಿನ ಸಂಶಯದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ, ಬಂದರೆ ತನಿಖೆಗೆ ಆದೇಶಿಸುವ ಕುರಿತು ತೀರ್ಮಾನಿಸಲಾಗುವುದು ಎಂದರು.


ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಲಕ್ಷ್ಮೀವರತೀರ್ಥ ಶ್ರೀಗಳು ಬುಧವಾರ ಬೆಳಗ್ಗೆ ತೀವ್ರ ರಕ್ತವಾಂತಿ ಮತ್ತು ಹೊಟ್ಟೆನೋವಿನಿಂದ ಬಳಲುತ್ತಿದ್ದ ಕಾರಣ ಮಣಿಪಾಲದ ಕೆಎಂಸಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದರು. ಆರಂಭದಲ್ಲಿ ಊಟದಲ್ಲಿ ವ್ಯತ್ಯಾಸವಾದ ಕಾರಣ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದು ವೈದ್ಯರು ಹೇಳಿದ್ದರು. ಆದರೆ, ಇಂದು ಬೆಳಿಗ್ಗೆ ಅವರ ದೇಹದಲ್ಲಿ ವಿಷದ ಅಂಶ ಕಂಡುಬಂದಿರುವುದು ಹಲವು ಪರೀಕ್ಷೆಯಿಂದ ಪತ್ತೆಯಾಗಿರುವುದಾಗಿ ಹೇಳಿದ್ದಾರೆ.