ಮಂಗಳೂರು: ಖ್ಯಾತ ಸ್ಯಾಕ್ಸೊಫೋನ್ ವಾದಕ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕದ್ರಿ ಗೋಪಾಲನಾಥ್ ಅವರು ಶುಕ್ರವಾರ ನಿಧನರಾಗಿದ್ದಾರೆ.


COMMERCIAL BREAK
SCROLL TO CONTINUE READING

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು, ಪತ್ನಿ ಮತ್ತು ಮಗನಾದ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಕಲಾಬಂಧುಗಳನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಮಂಗಳೂರಿನ ಪದವಿನಂಗಡಿಯ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 


ರಾಜ್ಯದಲ್ಲಷ್ಟೇ ಅಲ್ಲದೆ, ಯುರೋಪ್​​​, ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ, ಜರ್ಮನಿ ಸಿಂಗಪುರ,ಬಹರೇನ್​​​​​​,ಕತಾರ್, ಮಲೇಷಿಯಾ, ಶ್ರೀಲಂಕಾ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ಕದ್ರಿ ಅವರಿಗೆ ಸಾಕಷ್ಟು ಪ್ರಶಸ್ತಿಗಳು ಸಂದಿವೆ. 


ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ, ನಾದ ಗಂಧರ್ವ, ನಾದಕಲಾರತ್ನ, ಸಂಗೀತ ವಿದ್ಯಾರತ್ನ, ಪದ್ಮಶ್ರೀ ಪ್ರಶಸ್ತಿ, ತಮಿಳುನಾಡು ಸರ್ಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರಿ ಸೇರಿದಂತೆ ಹಲವು ಪ್ರಶಸ್ತಿಗಳು ಕದ್ರಿ ಅವರ ಅದ್ಭುತ ಸ್ಯಾಕ್ಸೊಫೋನ್ ವಾದನಕ್ಕೆ ಲಭಿಸಿವೆ. ಅಷ್ಟೇ ಅಲ್ಲದೆ, ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಸಹ ನೀಡಿ ಗೌರವಿಸಿದೆ.