ನದಿ ಜೋಡಣೆಯಿಂದ ಕರ್ನಾಟಕಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಕರ್ನಾಟಕವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನದಿ ಜೋಡಣೆ ಯೋಜನೆ ಘೋಷಣೆ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Feb 5, 2022, 09:12 AM IST
  • ಚರ್ಚಿಸದೆ, ಅಭಿಪ್ರಾಯ ಪಡೆಯದೆ ನದಿ ಜೋಡಣೆ ಯೋಜನೆ ಘೋಷಿಸಿರುವುದು ಒಕ್ಕೂಟ ವ್ಯವಸ್ಥೆಗೆ ಮಾಡಿರುವ ದ್ರೋಹ
  • ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆದು ಈ ಬಗ್ಗೆ ಚರ್ಚಿಸಿ, ಒಮ್ಮತದ ವಿರೋಧವನ್ನು ಕೇಂದ್ರಕ್ಕೆ ತಿಳಿಸಬೇಕು
  • ನದಿ ಜೋಡಣೆ ಯೋಜನೆಯಿಂದ ಕರ್ನಾಕಟಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ
ನದಿ ಜೋಡಣೆಯಿಂದ ಕರ್ನಾಟಕಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ title=
ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ

ಬೆಂಗಳೂರು: ಕರ್ನಾಟಕವೂ ಸೇರಿದಂತೆ ರಾಜ್ಯ ಸರ್ಕಾರಗಳ ಜೊತೆ ಚರ್ಚೆ ನಡೆಸದೆ, ರಾಜ್ಯದ ಜನರ ಅಭಿಪ್ರಾಯ ಪಡೆಯದೆ ನದಿ ಜೋಡಣೆ ಯೋಜನೆ(River-linking Projects)ಯನ್ನು ಘೋಷಿಸಿರುವುದು ಒಕ್ಕೂಟ ವ್ಯವಸ್ಥೆಗೆ ಮಾಡಿರುವ ದ್ರೋಹವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು  ದಕ್ಷಿಣದ ನದಿಗಳ ಜೋಡನೆಗೆ 46 ಸಾವಿರ ಕೋಟಿ ರೂ. ಅನುದಾನದ ಭರವಸೆ ನೀಡಿದ್ದಾರೆ. ಸಚಿವರು ತಮಿಳುನಾಡಿನವರಾಗಿದ್ದ ಕಾರಣಕ್ಕೆ ಈ ಯೋಜನೆ ಪ್ರಸ್ತಾಪ ಮಾಡಿರಬಹುದು. ಇದರಿಂದ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು’ ಅಂತಾ ಸಿದ್ದರಾಮಯ್ಯ(Siddaramaiah) ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಟ್ಟದಕಲ್ಲು-ಶಿರೂರು ಹೆದ್ದಾರಿ ವಿಸ್ತರಣೆಗೆ 264.15 ಕೋಟಿ ಮಂಜೂರು: ಗಡ್ಕರಿಗೆ ಸಿಎಂ ಧನ್ಯವಾದ

‘ಕೃಷ್ಣ, ಗೋಧಾವರಿ, ಪೆನ್ನಾರ್ ಮತ್ತು ಕಾವೇರಿ ನದಿಗಳ ಜೋಡಣೆ(River linking) ಬಗ್ಗೆ ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ಯಲ್ಲಿ ಚರ್ಚಿಸಲಾಗಿದೆ. ಯೋಜನೆಯಿಂದ 347 ಟಿಎಂಸಿ ನೀರು ಸಿಗಲಿದ್ದು, ದಕ್ಷಿಣದ ರಾಜ್ಯಗಳಿಗೆ ಹಂಚಿಕೆ ಮಾಡುವ ಯೋಜನೆ ಇದಾಗಿದೆ. ರಾಜಸ್ಥಾನ ಬಿಟ್ಟರೆ ದೇಶದಲ್ಲಿ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ. ಶೇ.70ರರಷ್ಟು ಕೃಷಿ ಭೂಮಿ ಮಳೆ ಆಶ್ರಿತ ಪ್ರದೇಶವಾಗಿದೆ. ನದಿಗಳ ಜೋಡಣೆಯಿಂದ ಹೆಚ್ಚು ನೀರು ತಮಿಳುನಾಡಿಗೆ ಹೋಗುತ್ತೆ. ಹೀಗಿದ್ದಾಗ ನಾವೇಕೆ ಈ ಯೋಜನೆಯನ್ನು ಒಪ್ಪಬೇಕು?’ ಅಂತಾ ಪ್ರಶ್ನಿಸಿದ್ದಾರೆ.

‘ಕೇಂದ್ರ ಬಿಜೆಪಿ ಸರ್ಕಾರ(Central Government) ತಕ್ಷಣ ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆದು ನದಿಜೋಡಣೆ ಬಗ್ಗೆ ಚರ್ಚೆ ನಡೆಸಬೇಕು. ನದಿಯಲ್ಲಿರುವ ನೀರಿನ ಲಭ್ಯತೆ ಮತ್ತು ಅದರಲ್ಲಿ ರಾಜ್ಯಗಳ ಪಾಲಿನ ಬಗ್ಗೆ ಮಾಹಿತಿ ಸಂಗ್ರಹಿಸಿ ರಾಜ್ಯಗಳಿಗೆ ನೀಡಬೇಕು. 1978ರಲ್ಲಿ ಮೊರಾರ್ಜಿ ದೇಸಾಯಿ, ನಂತರ ಅಟಲ್ ಬಿಹಾರಿ ವಾಜಪೇಯಿ ಅವರು ನದಿ ಜೋಡಣೆ ಯೋಜನೆಯ ಪ್ರಸ್ತಾಪ ಮಾಡಿದ್ದರು. ಗಂಗಾ ನದಿ ಹಿಮಾಲಯದಲ್ಲಿ ಹುಟ್ಟುವ ಕಾರಣಕ್ಕೆ ವರ್ಷವಿಡೀ ತುಂಬಿ ಹರಿಯುವುದರಿಂದ ಈ ಯೋಜನೆ ನಮ್ಮ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು, ಅದು ಹುಸಿಯಾಗಿದೆ’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: Murugesh Nirani : 'ಕೊಟ್ಟ ಕಾಣಿಕೆಯನ್ನು ಹಿಂಪಡೆಯುವಂತಹ ಸಣ್ಣ ಮನುಷ್ಯ ನಾನಲ್ಲ'

‘ವಾಜಪೇಯಿ ಅವರು ಗಂಗಾ-ಕಾವೇರಿ ನದಿ ಜೋಡಣೆ ಯೋಜನೆಯನ್ನು ಪ್ರಸ್ತಾಪ ಮಾಡಿದರು, ಆದರೆ ಆ ಬಗ್ಗೆ ಕ್ರಮ ಕೈಗೊಂಡಿಲ್ಲ. ಈಗಿನ ಬಿಜೆಪಿ ಸರ್ಕಾರ ಮತ್ತೆ ನದಿ ಜೋಡಣೆ ಪ್ರಸ್ತಾಪ ಮಾಡಿದೆ. ಇದರ ಸಾಧಕ ಬಾಧಕಗಳ ಬಗ್ಗೆ ರಾಜ್ಯದ ಜನರಿಗೆ ಮೊದಲು ಮಾಹಿತಿ ನೀಡಲಿ. ಬಜೆಟ್ ಮಂಡಿಸಿ 3 ದಿನಗಳಾದರೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ನದಿ ಜೋಡಣೆ ಪ್ರಸ್ತಾಪಕ್ಕೆ ಯಾವೊಬ್ಬ ಬಿಜೆಪಿ ಸಂಸದ, ಕರ್ನಾಟಕದ ಮುಖ್ಯಮಂತ್ರಿ, ಸಚಿವರು, ಶಾಸಕರು ಮಾತನಾಡಿಲ್ಲ. ಇವರು ರಾಜ್ಯದ ಹಿತರಕ್ಷಣೆ ಮಾಡುತ್ತಾರಾ? ಅಂತಾ ಪ್ರಶ್ನಿಸಿದ್ದಾರೆ.

‘ಕರ್ನಾಟಕವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನದಿ ಜೋಡಣೆ ಯೋಜನೆ(River-linking Projects) ಘೋಷಣೆ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಹಾಗಾಗಿ ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಸರ್ವಪಕ್ಷ ಸಭೆ ಕರೆದು ಈ ಬಗ್ಗೆ ಚರ್ಚಿಸಿ, ಒಮ್ಮತದ ವಿರೋಧವನ್ನು ಕೇಂದ್ರಕ್ಕೆ ತಿಳಿಸಬೇಕು ಎಂದು ಆಗ್ರಹಿಸುತ್ತೇನೆ. ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕದ ಬಗ್ಗೆ ಸ್ವಲ್ಪವಾದರೂ ಕಾಳಜಿ ಇದ್ದರೆ ಮೇಕೆದಾಟು ಯೋಜನೆಗೆ ಮೊದಲು ಪರಿಸರ ಅನುಮತಿ ಪತ್ರ ಕೊಡಿಸಲಿ. ದಕ್ಷಿಣದ ನದಿಗಳ ಜೋಡಣೆ ಆಮೇಲೆ ನೋಡೋಣ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News