ಚಿಕ್ಕಬಳ್ಳಾಪುರ : ನಂದಿಬೆಟ್ಟದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ರೋಪ್ ವೇ ಯೋಜನೆ ನೆನೆಗುದಿಗೆ ಬಿದ್ದಿದ್ದು, ಶೀಘ್ರವೇ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದರು.


COMMERCIAL BREAK
SCROLL TO CONTINUE READING

ಬುಧವಾರ ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆನಂದ್ ಸಿಂಗ್(Anand Singh), ರೋಪ್ ವೇ ಯೋಜನೆಗೆ ಸಂಬಂಧಿಸಿದಂತೆ ತಿಂಗಳಾಂತ್ಯಕ್ಕೆ ಟೆಂಡರ್ ಆಹ್ವಾನಿಸಲಾಗುವುದು. ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.


ಇದನ್ನೂ ಓದಿ : ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಎಂ ಬೊಮ್ಮಾಯಿ ಹೇಳಿದ್ದು ಹೀಗೆ..


ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿರುವ ನಂದಿ ಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಮಂದಿ ಪ್ರವಾಸಿಗರು ಪ್ರತಿ ನಿತ್ಯ ಭೇಟಿ ಕೊಡುತ್ತಾರೆ. ಇಲ್ಲಿ ಯಾವುದೇ ಮೂಲಸೌಕರ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಲಾಗುತ್ತದೆ. ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಶೀಘ್ರವೇ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.


ಇಲ್ಲಿಗೆ ಬರುವ ಪ್ರವಾಸಿಗರಿಗೆ ಪ್ರಕೃತಿ ಸೌಂದರ್ಯ ಸವಿಯುವ ಜತೆಗೆ ಇಲ್ಲಿನ ಕಲೆ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ‘ಕಲಾಧಾಮ’(Kladhama) ಎಂಬ ಚಟುವಟಿಕೆ ಆರಂಭಿಸುವ ಬಗ್ಗೆ ಚಿಂತಿಸಲಾಗಿದೆ. ಇದರಿಂದಾಗಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಉದ್ಯೋಗ ದೊರಕಿಸಿಕೊಟ್ಟಂತಾಗುತ್ತದೆ. ಅಲ್ಲದೆ,
ವೃದ್ಧರು ಹಾಗೂ ವಿಕಲಚೇತನರಿಗೆ ಬೆಟ್ಟದ ಸೌಂದರ್ಯ ಸವಿಯಲು ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದರು.


ಮನಸೋ ಇಚ್ಛೆ ಪ್ರವೇಶ ಹಾಗೂ ಪಾರ್ಕಿಂಗ್ ಶುಲ್ಕ ಪಡೆಯಲಾಗುತ್ತದೆ ಎಂದು ಸಾರ್ವಜನಿಕರು ಸಚಿವರ ಗಮನಕ್ಕೆ ತಂದರು. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಶುಲ್ಕ ಕಡಿಮೆ ಮಾಡುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಇದೇ ವೇಳೆ ಭರವಸೆ ನೀಡಿದರು.


ಇದನ್ನೂ ಓದಿ : ಎಮರ್ಜೆನ್ಸಿ ವಾರ್ಡ್ ಫುಲ್.. ಬೆಡ್ ಇಲ್ಲ! ನಿಮ್ಹಾನ್ಸ್ ನಲ್ಲಿ ಗಂಟೆಗಟ್ಟಲೇ ಕಾಯ್ದರು ಸಿಗ್ತಿಲ್ಲ ಚಿಕಿತ್ಸೆ, ಇವರ ಗೋಳು ಕೇಳೋರು ಯಾರು?


ಮೂಲಭೂತ ಸೌಕರ್ಯದಲ್ಲಿ ಪ್ರವಾಸಿಗರಿಗೆ(Tourist) ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಪಾರ್ಕಿಂಗ್, ಉದ್ಯಾನವನ, ಮಕ್ಕಳ ಪಾರ್ಕ್ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳಕ್ಕೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.


ನಂದಿಬೆಟ್ಟ(Nandi Hills)ವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಇನ್ನಷ್ಟು ಕ್ರಮ ವಹಿಸಲಾಗುವುದು ಎಂದರು.


ಜೋಗದಲ್ಲಿ ರೋಪ್ ವೇ! 


ಇನ್ನು ಜೋಗ ಜಲಪಾತ(Jog Falls)ದಲ್ಲಿ 185 ಕೋಟಿ ರೂ. ವೆಚ್ಚದಲ್ಲಿ ರೋಪ್ ವೇ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆತಿದ್ದು, ಕಾಮಗಾರಿಗಳು ಪ್ರಾರಂಭಗೊಳ್ಳಲಿವೆ. ಅದರಂತೆ ಹಂಪಿ, ಹಳೇಬೀಡು, ಬೇಲೂರು, ಬಾದಾಮಿಯಲ್ಲಿ ಪ್ರವಾಸೋದ್ಯಮದ ಇಲಾಖೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭಗೊಂಡಿವೆ ಎಂದು ವಿವರಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.