ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ  ಕಾರ್ಯಗಳಿಗೆ ಈ ಸಾಲಿಗೆ ನಿಗದಿಯಾಗಿರುವ 29 ಸಾವಿರ  ಕೋಟಿ ರೂ.ಗಳ ಅನುದಾನವನ್ನು  ಇದೇ ವರ್ಷದಲ್ಲಿ ಸಂಪೂರ್ಣವಾಗಿ ಖರ್ಚು ಮಾಡಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಯೋಜನೆಗಳ ಅನುಷ್ಠಾನಗೊಳ್ಳದಿದ್ದರೆ  ಆಯಾ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿಸಲಾಗುವುದು. ಹಾಗಾಗಿ ಅಧಿಕಾರಿಗಳು ಶಿಕ್ಷೆಗೆ ಒಳಪಡದೆ, ಯೋಜನೆಗಳ ಅನುದಾನವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದರು. 


COMMERCIAL BREAK
SCROLL TO CONTINUE READING

ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಕುರಿತಂತೆ ನಿನ್ನೆ ನಡೆದ ರಾಜ್ಯ ಪರಿಷತ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖಾ ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ದುರ್ಬಳಕೆಗೆ ಅವಕಾಶ ನೀಡದೆ, ಸರ್ಕಾರದ ಯೋಜನೆಗಳನ್ನು ಪ್ರತಿ ಅರ್ಹ ಫಲಾನುಭವಿಗೆ ತಲುಪಿಸಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ  ರಾಜ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಸಹಕರಿಸಬೇಕು ಎಂದರು. 


ಯೋಜನೆಗಳ ಅನುಷ್ಠಾನದಲ್ಲಿರುವ ನ್ಯೂನತೆಗಳನ್ನು ನೀಡಲಾಗಿರುವ ಸೂಚನೆಗಳಿಗೆ ಅನುಸಾರವಾಗಿ ಸರಿಪಡಿಸುವಂತೆ ತಿಳಿಸಿದ ಸಿಎಂ, ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಸಿದ್ಧಪಡಿಸುವಂತೆ ಸೂಚಿಸಿದರು. 


ಸಭೆಯಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ,  ಸಂಸದ ಧೃವನಾರಾಯಣ, ಶಾಸಕರಾದ ಡಾ: ಕೆ.ಅನ್ನದಾನಿ, ಡಾ:ಜಿ.ಉಮೇಶ್ ಯಾದವ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.