ಇಂದಿನಿಂದ ಬೆಂಗಳೂರು ನಗರಾದ್ಯಂತ 2 ದಿನ ನಿಷೇಧಾಜ್ಞೆ ಜಾರಿ
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ.
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರು ನಗರಾದ್ಯಂತ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಮಂಗಳವಾರ ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡುತ್ತಿದ್ದು, 5 ಜನಕ್ಕಿಂತ ಜಾಸ್ತಿ ಜನ ಒಂದು ಕಡೆ ಸೇರುವಂತಿಲ್ಲ, ಪ್ರತಿಭಟನೆ ಮಾಡುವಂತಿಲ್ಲ ಎಂದು ತಿಳಿಸಿದರು.
ಅಷ್ಟೇ ಅಲ್ಲದೆ, ನಗರಾದ್ಯಂತ ಇಂದು ಮತ್ತು ನಾಳೆ ಬಾರ್, ವೈನ್ ಸ್ಟೋರ್ ಮತ್ತು ಪಬ್ ಗಳನ್ನು ಬಂದ್ ಮಾಡಲು ಸೂಚನೆ ನೀಡಲಾಗಿದೆ. ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಜುಲೈ 25ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅಲೋಕ್ ಕುಮಾರ್ ತಿಳಿಸಿದರು.