ಎರಡು ದಿನಗಳ ಕಾಲ ವಿಧಾನ ಸೌಧದ ಸುತ್ತಮುತ್ತ ನಿಷೇದಾಜ್ಞೆ ಜಾರಿ
ಸೋಮವಾರದಂದು ನೂತನವಾಗಿ ಆಯ್ಕೆಯಾದ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಪೊಲೀಸರು ಈಗ ವಿಧಾನಸೌಧದ ಸುತ್ತಮುತ್ತ ನಿಷೇದಾಜ್ಞೆ ಜಾರಿ ಮಾಡಿದ್ದಾರೆ.
ಬೆಂಗಳೂರು: ಸೋಮವಾರದಂದು ನೂತನವಾಗಿ ಆಯ್ಕೆಯಾದ ಮುಖ್ಯಮಂತ್ರಿ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತು ಪಡಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನ ಪೊಲೀಸರು ಈಗ ವಿಧಾನಸೌಧದ ಸುತ್ತಮುತ್ತ ನಿಷೇದಾಜ್ಞೆ ಜಾರಿ ಮಾಡಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಶನಿವಾರದಂದು ಆದೇಶ ಹೊರಡಿಸಿದ್ದು, ಜುಲೈ 29 ರಂದು ಬೆಳಿಗ್ಗೆ 6 ರಿಂದ ಜುಲೈ 30 ರ ಮಧ್ಯರಾತ್ರಿಯವರೆಗೆ ಬೆಂಗಳೂರಿನ ವಿಧಾನ ಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಲಾಗುವುದು ಎಂದು ತಿಳಿಸಿದ್ದಾರೆ. ಸೆಕ್ಷನ್ 144 ಒಂದು ಪ್ರದೇಶದಲ್ಲಿ 5ಕ್ಕೂ ಹೆಚ್ಚು ಜನರು ಸೇರುವುದನ್ನು ನಿಷೇಧಿಸುತ್ತದೆ.
ಸೋಮವಾರ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ. ಬಿಜೆಪಿ ನಾಯಕ ಯಡಿಯೂರಪ್ಪ ನಾಲ್ಕನೇ ಬಾರಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಹೀಗಾಗಿ ಅವರು ರಾಜ್ಯ ವಿಧಾನಸಭೆಯಲ್ಲಿ ತಮ್ಮ ಸರ್ಕಾರಕ್ಕೆ ಬಹುಮತವಿದೆ ಎನ್ನುವುದನ್ನು ಸಾಬೀತು ಪಡಿಸಬೇಕಾಗುತ್ತದೆ.
14 ತಿಂಗಳ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನವಾದ ಹಿನ್ನಲೆಯಲ್ಲಿ ಯಡಿಯೂರಪ್ಪ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.