ಮೈಸೂರು: ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ಏತನ್ಮಧ್ಯೆ, ಆಷಾಢ ಶುಕ್ರವಾರದ ಪ್ರಯುಕ್ತ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಬರಿಗಾಲಿನಲ್ಲಿ ಮೆಟ್ಟಿಲ ಮೂಲಕ ತೆರಳಿದ ಸಂಸದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು.
ಗುರುವಾರ ಸದನದಲ್ಲಿ ಬಹುಮತ ಸಾಬೀತಿಗೆ ಸ್ಪೀಕರ್ ಅವಕಾಶ ಕೊಡದ ಹಿನ್ನೆಲೆಯಲ್ಲಿ ಸ್ಪೀಕರ್ ವಿರುದ್ಧ ಹೇಳಿಕೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆ, ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್. ಇದೇ ಕಾರಣಕ್ಕಾಗಿ ಅವರು ಹೀಗೆ ನಡೆದುಕೊಳ್ಳುತ್ತಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ವಿರುದ್ಧ ನೇರವಾಗಿ ಆರೋಪ ಮಾಡಿದ್ದರು.
#WATCH Mysuru: BJP Karnataka MP, Shobha Karandlaje climbs 1001 steps of Sri Chamundeshwari Devi Temple to pray for BS Yeddyurappa to become the next Chief Minister of the state. pic.twitter.com/coP7X0vRuo
— ANI (@ANI) July 19, 2019
ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಬಳಿಕ ಅಲ್ಪಮತಕ್ಕೆ ಕುಸಿದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು, ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಈ ವಾರದ ಆರಂಭದಲ್ಲಿ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದ್ದರು.
"ಕಾಂಗ್ರೆಸ್ ಮತ್ತು ಜೆಡಿಯುನ ಸುಮಾರು 15-16 ಶಾಸಕರು ರಾಜೀನಾಮೆ ನೀಡಿದ್ದಾರೆ. ನಮ್ಮಲ್ಲಿ ಹೆಚ್ಚಿನ ಸಂಖ್ಯೆಯ ಶಾಸಕರು ಇರುವುದರಿಂದ ವಿಶ್ವಾಸ ಮತಯಾಚನೆಯಲ್ಲಿ ನಮ್ಮ ಪಕ್ಷಕ್ಕೆ ಜಯಸಿಗಲಿದೆ" ಎಂದು ಅವರು ಹೇಳಿದ್ದರು.