ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ ಆಕ್ರೋಶ

ಸಿದ್ದರಾಮಯ್ಯ ಅನಗತ್ಯ ವಿವಾದ ಸೃಷ್ಟಿಸಿ ಗೊಂದಲ ಆರಂಭ ಮಾಡಿದ್ದಾರೆ. ಬಹುಶಃ ಅದಕ್ಕೆ ನಾನೇ ಅಂತ್ಯ ಹಾಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Written by - ZH Kannada Desk | Last Updated : Oct 19, 2021, 02:56 PM IST
  • ಸಿದ್ದರಾಮಯ್ಯ ಮೇಲೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ?
  • ಕಾಂಗ್ರೆಸ್‌ ಪಕ್ಷಕ್ಕೆ ಉಪಚುನಾವಣೆಯಲ್ಲಿ ಮಾತನಾಡಲು ವಿಷಯವೇ ಇಲ್ಲ
  • ಸಿದ್ದರಾಮಯ್ಯ ವಿವಾದ ಆರಂಭಿಸಿದ್ದಾರೆ, ನಾನು ಅಂತ್ಯ ಹಾಡುತ್ತೇನೆಂದ ಎಚ್‍ಡಿಕೆ
ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ: ಎಚ್‌ಡಿಕೆ ಆಕ್ರೋಶ

ಕಲಬುರಗಿ: ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ(Siddaramaiah) ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮಂಗಳವಾರ ಸಿಂಧಗಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಲು ಕಲಬುರಗಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಮೇಲೆ ಜಗಳಕ್ಕೆ ಹೋಗಲು ನನಗೆ ಬೇರೆ ಕೆಲಸ ಇಲ್ಲವೇ? ಅವರು ವಿವಾದ ಆರಂಭಿಸಿದ್ದಾರೆ, ನಾನು ಅಂತ್ಯ ಹಾಡುತ್ತೇನೆ’ ಅಂತಾ ಗುಡುಗಿದ್ದಾರೆ.  

‘ಸಿದ್ದರಾಮಯ್ಯ ಮೇಲೆ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ನನಗೇನು ಬೇರೆ ಕೆಲಸ ಇಲ್ಲವೇ? ಮುಸ್ಲಿಂ ಅಭ್ಯರ್ಥಿಗಳ ರಾಜಕೀಯ ವಿವಾದ ಶುರು ಮಾಡಿದ್ದು ಯಾರು? ಅವರೇ ಅಲ್ಲವೇ?’ ಎಂದು ಎಚ್‍ಡಿಕೆ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಹಾನಗಲ್‌ ಮತ್ತು ಸಿಂಧಗಿ(Sindagi By election)ಯಲ್ಲಿ ಜೆಡಿಎಸ್‌ ಪಕ್ಷ ಇಬ್ಬರು ಸುಶಿಕ್ಷಿತ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ. ಆದರೆ ಜೆಡಿಎಸ್‌ ಸೆಕ್ಯುಲರ್‌ ಮತಗಳನ್ನು ವಿಭಜಿಸಿ ಬಿಜೆಪಿಗೆ ಗೆಲ್ಲಲು ಅವಕಾಶ ಮಾಡಿಕೊಡಲು ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದೆ ಎಂದು ಸಿದ್ದರಾಮಯ್ಯ ಮೊದಲು ಹುಯಿಲೆಬ್ಬಿಸಿದರು. ಅನಗತ್ಯ ವಿವಾದವನ್ನು ಸೃಷ್ಟಿಸಿ ಗೊಂದಲ ಆರಂಭ ಮಾಡಿದ್ದಾರೆ. ಬಹುಶಃ ಅದಕ್ಕೆ ನಾನೇ ಅಂತ್ಯ ಹಾಡಬೇಕಾಗುತ್ತದೆ. ಇಂತಹ ಸ್ಥಿತಿಗೆ ನನ್ನನ್ನು ದೂಡಿದ್ದಾರೆ ಎಂದು ಎಚ್‌ಡಿಕೆ(HD Kumaraswamy) ಮಾರ್ಮಿಕವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣೆ, ಉಪಚುನಾವಣೆ ಬಂದಾಗಲೆಲ್ಲ ವರಸೆ ಬದಲಾಯಿಸುವ ಸಿದ್ದರಾಮಯ್ಯ: ಬಿಜೆಪಿ   

‘ಕಾಂಗ್ರೆಸ್‌ ಪಕ್ಷವೇ ಮುಸ್ಲಿಂ ಅಭ್ಯರ್ಥಿ(Muslim Candidate)ಗೆ ಟಿಕೆಟ್‌ ನೀಡಬಹುದಾಗಿತ್ತಲ್ಲವೇ? ಅದನ್ನು ಮಾಡದೇ ಜೆಡಿಎಸ್‌ ಟಿಕೆಟ್‌ ಕೊಟ್ಟಿತು ಕೊರಗುವುದು ಏಕೆ? ಸಿಂಧಗಿಯಲ್ಲಿ ನಮ್ಮ ಪಕ್ಷದ ನಿಷ್ಠಾವಂತ ಕುಟುಂಬಕ್ಕೆ ಟಿಕೆಟ್‌ ಕೊಟ್ಟಿದ್ದೇವೆ. ಪಕ್ಷದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಮರಣ ಹೊಂದಿದ ನಾಯಕರ ಕುಟುಂಬದ ಹೆಣ್ಣು ಮಗಳು ನಾಜಿಯಾ ಶಕೀಲಾ ಅಂಗಡಿ ಅವರಿಗೆ ಟಿಕೆಟ್‌ ನೀಡಿದ್ದೇವೆ. ಇದರ ಬಗ್ಗೆ ಕಾಂಗ್ರೆಸ್‌ಗೆ ಸಂಕಟವೇಕೆ? ಕ್ಷೇತ್ರದಲ್ಲಿ ಪೈಪೋಟಿ ಇರುವುದು ಜೆಡಿಎಸ್-ಬಿಜೆಪಿ ನಡುವೆ ಮಾತ್ರ. ಯಾವ ಚುನಾವಣೆಯ್ಲಲೂ ಕಾಂಗ್ರೆಸ್‌ 2ನೇ ಸ್ಥಾನಕ್ಕೂ ಬಂದಿರಲಿಲ್ಲ. ಹಾಗಿದ್ದ ಮೇಲೆ ಜೆಡಿಎಸ್‌ ವಿರುದ್ಧ ಅಪಪ್ರಚಾರ ಮಾಡುವುದೇಕೆ? ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.  

‘ನಾನು ಯಾವುದೇ ಕಾರಣಕ್ಕೂ ಅವರ ತಂಟೆಗೆ ಹೋಗುವುದಿಲ್ಲ, ಅವರೇ ಪದೇಪದೆ ನಮ್ಮ ಸುದ್ದಿಗೆ ಬರುತ್ತಿದ್ದಾರೆ. ನಮಗೆ ಮಾಡಲು ಸಾಕಷ್ಟು ಕೆಲಸಗಳಿವೆ, ಹೇಳಲು ಅನೇಕ ವಿಚಾರಗಳಿವೆ. ಜನರ ಬಳಿ ಮತ ಕೇಳಲು ನಮ್ಮಲ್ಲಿ ಜನರಿಗಾಗಿ ಮಾಡಿದ ಸೇವೆ ಇದೆ. ಕಾಂಗ್ರೆಸ್‌ ಪಕ್ಷ(Congress Party)ದ ಹೆಸರೇಳಿಕೊಂಡು ಮತ ಕೇಳಬೇಕಾದ ಕರ್ಮ ನಮಗಿಲ್ಲ. ಆದರೆ ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಹೆಸರೇಳಿಕೊಂಡೇ ಮತಯಾಚನೆ ಮಾಡುತ್ತಿದ್ದಾರೆ’ ಎಂದು ಎಚ್‍ಡಿಕೆ ತರಾಟೆಗೆ ತೆಗೆದುಕೊಂಡರು.

ನೀರಾವರಿ ಯೋಜನೆ ನಿಲ್ಲಿಸಿದ ಬಿಜೆಪಿ ಸರ್ಕಾರ

ನಾಗಠಾಣ ಮತ್ತು ಇಂಡಿ ವಿಧಾನಸಭೆ ಕ್ಷೇತ್ರದ ಸುಮಾರು 28,000 ಹೆಕ್ಟೇರ್‌ ಭೂಮಿಗೆ ನೀರೊದಗಿಸುವ ಯೋಜನೆಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ರೇವಣಸಿದ್ದೇಶ್ವರ ವೃದ್ಧಿ ಯೋಜನೆಡಿ ಬಜೆಟ್‌ ಮೂಲಕವೇ 250 ಕೋಟಿ ರೂ.ಗಳನ್ನು ಮೀಸಲಿರಿಸಿದ್ದೆ. ಆದರೆ ಬಿಜೆಪಿ ಸರ್ಕಾರ ಅದಕ್ಕೆ ತಡೆಯೊಡ್ಡಿದೆ’ ಎಂದು ಎಚ್‍ಡಿಕೆ ಆರೋಪಿಸಿದರು.

ಇದನ್ನೂ ಓದಿ: Karnataka Congress Controversial Tweet: ಪ್ರಧಾನಿ ಮೋದಿ ವಿರುದ್ಧದ ಅವಹೇಳನಕಾರಿ ಟ್ವೀಟ್ ಡಿಲೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್ ಘಟಕ   

ಯೋಜನೆಗೆ ಬಿಜೆಪಿ ಸರ್ಕಾರ(BJP Govt.) ತಡೆಯೊಡ್ಡಿದ್ದನ್ನು ಪ್ರತಿಭಟಿಸಿ ಆ ಭಾಗದ ರೈತರು ಕಳೆದ ೪೦ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಕೆಲ ದಿನದ ಹಿಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಲ್ಲಿನ ರೈತರನ್ನು ಭೇಟಿಯಾಗಿ ಅವರ ಬೇಡಿಕೆಗೆ ದನಿಗೂಡಿಸಿದ್ದಾರೆ. ನಿಮ್ಮ ಪ್ರತಿಭಟನೆಯನ್ನು ನಿಲ್ಲಿಸಿ ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಯೋಜನೆ ಕಾರ್ಯಗತ ಮಾಡುವ ನಿಟ್ಟಿನಲ್ಲಿ ನಿಮ್ಮ ಜೊತೆ ನಿಂತು ಹೋರಾಟ ನಡೆಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷಕ್ಕೆ ಚುನಾವಣೆಯಲ್ಲಿ ಮಾತನಾಡಲು ವಿಷಯವೇ ಇಲ್ಲ. ನಮಗೆ ಅಂತಹ ಕೊರತೆ ಇಲ್ಲ. ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ನಾನು ಮತ್ತು ನಮ್ಮ ತಂದೆಯವರು ಕೊಟ್ಟ ನೀರಾವರಿ ಯೋಜನೆಗಳು ಇನ್ನಿತರೆ ಕಾರ್ಯಕ್ರಮಗಳ ಮೂಲಕ ಜನರ ಮುಂದೆ ಹೋಗುತ್ತೇವೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

More Stories

Trending News