ಬೆಂಗಳೂರು: ಬಾದಾಮಿ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಬಾದಾಮಿ ನಗರದ ಮುಖ್ಯರಸ್ತೆ ಕಾಮಗಾರಿ ಈಗಾಗಲೇ ವಿಲಬವಾಗಿದ್ದು, ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಬೇಕು. ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ವಿಭಜಕ, ಎಲ್ಇಡಿ ದೀಪ ಅಳವಡಿಸಿ, ಸುಸಜ್ಜಿತ ಪಾದಚಾರಿ ಮಾರ್ಗ ನಿರ್ಮಿಸಬೇಕು. ಎಲ್ಲಕ್ಕಿಂತ ಹೆಚ್ಚಾಗಿ ರಸ್ತೆಗಳು ಗುಣಮಟ್ಟದಿಂದ ಕೂಡಿರಬೇಕು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಸದ್ಯ ಬಾದಾಮಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಿರುವ ಸಿದ್ದರಾಮಯ್ಯ ಅವರು, ಕ್ಷೇತ್ರಾದ್ಯಂತ ಪ್ರವಾಸ ಕೈಗೊಂಡು, ಸಮಸ್ಯೆಗಳ ಮತ್ತು ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.