ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ನರೇಂದ್ರ ಮೋದಿ ಸರ್ಕಾರ ವಾಪಸು ಪಡೆದಂತೆ ರಾಜ್ಯ ಬಿಜೆಪಿ ಸರ್ಕಾರ ಕೂಡಾ ರೈತ ವಿರೋಧಿಯಾಗಿರುವ ಎಪಿಎಂಸಿ (ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ (ತಿದ್ದುಪಡಿ) ಕಾಯ್ದೆಯನ್ನು ತಕ್ಷಣ ವಾಪಾಸು ಪಡೆಯಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಕರಾಳ ಕೃಷಿ ಕಾಯ್ದೆಗಳನ್ನು ರೈತರ ಮೇಲೆ ಹೇರಿದ ನರೇಂದ್ರ ಮೋದಿ ಸರ್ಕಾರದ ಅಪರಾಧದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಸಮಾನ ಪಾಲಿದೆ.ನರೇಂದ್ರ ಮೋದಿ ಅವರು  ಕೊಂದ ಪಾಪವನ್ನು ತಿಂದು ಪರಿಹರಿಸಿಕೊಂಡರು, ಈಗ ರಾಜ್ಯ ಬಿಜೆಪಿ ಸರ್ಕಾರದ ಸರದಿ.ಎಪಿಎಂಸಿಗಳ ನಿಯಂತ್ರಣವಿಲ್ಲದೆ ಸ್ವತಂತ್ರವಾಗಿ ವ್ಯಾಪಾರ ನಡೆಸುವ ಅವಕಾಶಕ್ಕಾಗಿ ಪ್ರಯತ್ನಿಸುತ್ತಲೇ ಬಂದಿರುವ ಖಾಸಗಿ ಕಂಪೆನಿಗಳಿಗೆ ಹೆಬ್ಬಾಗಿಲು ತೆರೆಯುವುದೇ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆಯ ದುರುದ್ದೇಶವಾಗಿದೆ" ಎಂದು ಟೀಕಿಸಿದರು.


ಇದನ್ನೂ ಓದಿ: RSS Chief: '75 ವರ್ಷಗಳು ನಾವು ಸರಿಯಾದ ದಾರಿಯನ್ನು ಅನುಸರಿಸಿಲ್ಲ, ಹೀಗಾಗಿ ಅಭಿವೃದ್ಧಿ ನಿಂತುಹೋಗಿದೆ'


ಎಪಿಎಂಸಿಯ ಹೊಸ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರಕ್ಕೆ ಎಂಪಿಎಂಸಿಯಿಂದ ಹೊರಗಿರುವ ವರ್ತಕರ ಮೇಲೆ ಯಾವ ನಿಯಂತ್ರಣವೂ ಇರುವುದಿಲ್ಲ.ಅವರ ವ್ಯವಹಾರದ ಮೇಲೆ ನಿಗಾ ಇಡುವಂತಿಲ್ಲ, ಶುಲ್ಕ, ಸೆಸ್, ಲೆವಿ ಸಂಗ್ರಹಿಸುವಂತಿಲ್ಲ.ಇದು ಸರ್ಕಾರದ ಸಂಪೂರ್ಣ ಶರಣಾಗತಿ. ಪ್ರಸ್ತುತ 6% ರೈತರು  ಎಪಿಎಂಸಿಗಳಲ್ಲಿ ಬೆಳೆ ಮಾರಾಟ ಮಾಡುತ್ತಿದ್ದು 94% ರೈತರಿಗೆ ಮಾರುಕಟ್ಟೆ ಸೌಲಭ್ಯಗಳಿಲ್ಲ. ರೈತರಿಗೆ ನೆರವಾಗುವ ಉದ್ದೇಶ ಸರ್ಕಾರಕ್ಕಿದ್ದರೆ ಮಾರುಕಟ್ಟೆಗಳಿಲ್ಲದ ಕಡೆಗಳಲ್ಲಿ ಎಪಿಎಂಸಿಯಿಂದ ಪರವಾನಿಗೆ ಪಡೆದು ಮಾರುಕಟ್ಟೆಗಳನ್ನು ಸ್ಥಾಪಿಸಲು ಸರ್ಕಾರ ಉತ್ತೇಜನ ನೀಡಬಹುದಾಗಿದೆ" ಎಂದು ಹೇಳಿದರು.


ರೈತರ ಭೂಮಿಗಿದ್ದ ರಕ್ಷಣೆಯನ್ನು ಕಿತ್ತು ಹಾಕಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಭೂಗಳ್ಳರಿಗೆ ನೆರವಾಗುವ ದುರುದ್ದೇಶದ್ದು.ನಮ್ಮ ವಿರೋಧವನ್ನು ಧಿಕ್ಕರಿಸಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಲು ಹೊರಟಿದೆ. ಕೇಂದ್ರ ಸರ್ಕಾರದಂತೆ ರಾಜ್ಯ ಸರ್ಕಾರ ಕೂಡಾ ತನ್ನ ತಪ್ಪನ್ನು ತಿದ್ದಿಕೊಳ್ಳಬೇಕು.ಕೃಷಿ ಭೂಮಿ ಖರೀದಿಗೆ ಇದ್ದ ರೂ.25 ಲಕ್ಷ ಆದಾಯದ ಮಿತಿಯನ್ನು ರದ್ದುಗೊಳಿಸಿ,ಕೃಷಿಕರಲ್ಲದವರು ಕೂಡಾ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಲು, ಭೂ ಸುಧಾರಣಾ ಕಾಯ್ದೆ 1961ರ ಸೆಕ್ಟನ್ 80 ಮತ್ತು 79 ಎ ಬಿ ಸಿ ಗಳನ್ನು ರದ್ದು ಮಾಡಿರುವ ಬಿಜೆಪಿ ಸರ್ಕಾರ, ರೈತರನ್ನು ಬೀದಿಪಾಲು ಮಾಡಲು ಹೊರಟಿದೆ" ಎಂದು ವಾಗ್ದಾಳಿ ನಡೆಸಿದರು.


ಇದನ್ನೂ ಓದಿ: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು- ಸಿದ್ಧರಾಮಯ್ಯ 


ಭೂ ಸುಧಾರಣಾ ಕಾಯ್ದೆ 1961ರ ಸೆಕ್ಷನ್ A,B,C ಯಡಿಯಲ್ಲಿ ಸುಮಾರು 1.7 ಲಕ್ಷ ಎಕರೆ ಜಮೀನಿಗೆ ಸಂಬಂಧಿಸಿದ 13,814 ಪ್ರಕರಣಗಳು ದಾಖಲಾಗಿತ್ತು.ಭೂ ಸುಧಾರಣೆ ತಿದ್ದುಪಡಿ ಮಸೂದೆಯಿಂದ ಈ ಪ್ರಕರಣಗಳು ರದ್ದಾಗಿ ಸರ್ಕಾರದ ಖಜಾನೆಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಲಿದೆ.ಸದನದ ಒಳಗೆ ಮತ್ತು ಹೊರಗೆ ಈ ಎರಡು ಕರಾಳ ಕಾಯ್ದೆಗಳನ್ನು ರಾಜ್ಯ ಕಾಂಗ್ರೆಸ್ ಪಕ್ಷ ವಿರೋಧಿಸಿದೆ.ಇಂತಹ ಕಾಯ್ದೆಗಳನ್ನು ರೂಪಿಸುವ ಹಂತದಲ್ಲಿ ರೈತ ನಾಯಕರು ಮತ್ತು ವಿರೋಧಪಕ್ಷಗಳ ಜೊತೆ ಚರ್ಚೆ ನಡೆಸುವುದು ಪ್ರಜಾಪ್ರಭುತ್ವದ ನಡವಳಿಕೆ.ಬಿಜೆಪಿ ಸರ್ಕಾರ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ ಎಂದು ಕಿಡಿ ಕಾರಿದರು.


ಎಪಿಎಂಸಿ(ಉತ್ತೇಜನ ಮತ್ತು ಸೌಲಭ್ಯ) ಕಾಯ್ದೆ ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ವಾಪಸು ಪಡೆಯಲು ರಾಜ್ಯ ಕಾಂಗ್ರೆಸ್ ಪಕ್ಷ ಹೋರಾಟ ನಡೆಸುವುದರ ಜೊತೆಗೆ ರಾಜ್ಯದ ರೈತ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಹೋರಾಟಕ್ಕೂ ಬೆಂಬಲ ನೀಡಲಿದೆ ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.