ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರ್ಕಾರ ರಚಿಸುವಲ್ಲಿ ವಿಫಲವಾಗಿರುವ ಬಿಜೆಪಿ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆಗಸ್ಟ್ 16 ರವರೆಗೂ ಬಿಜೆಪಿ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನೇತೃತ್ವದ ಪ್ರತ್ಯೇಕ ಮೂರು ತಂಡಗಳು 8 ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಲಿವೆ. ಪ್ರವಾಸದ ವೇಳೆ ಆಯಾ ಜಿಲ್ಲೆಯ ಕೋರ್ ಕಮಿಟಿ ಸಭೆ ನಡೆಸಿ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಲಿದ್ದಾರೆ.
ಪಕ್ಷ ಸಂಘಟನೆ ಹಾಗೂ ಜಿಲ್ಲೆಗಳ ಸ್ಥಿತಿಗತಿ ತಿಳಿಯಲು ನಾಳೆಯಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದೇನೆ. ಮೊದಲ ದಿನ ಬೀದರ್ ಹಾಗೂ ಕಲಬುರಗಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇನೆ. pic.twitter.com/pe1O2sDzMG
— B.S. Yeddyurappa (@BSYBJP) August 8, 2018
ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಯಡಿಯೂರಪ್ಪ ನೇತೃತ್ವದ ತಂಡ ಪ್ರವಾಸ ನಡೆಸಲಿದ್ದಾರೆ.
ಮಧ್ಯ ಕರ್ನಾಟಕದಲ್ಲಿ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮಹಾನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದ ತಂಡ ಪ್ರವಾಸ ಕೈಗೊಂಡರೆ, ಇನ್ನು ಮೈಸೂರು ಭಾಗದಲ್ಲಿ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆ.ಎಸ್. ಈಶ್ವರಪ್ಪರ ತಂಡ ಪ್ರವಾಸ ಕೈಗೊಳ್ಳಲಿದೆ.