ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ನೆರೆ ಪರಿಸ್ಥಿತಿ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲು ಹಾಗೂ ರಾಜ್ಯ ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ರಾತ್ರಿ ದೆಹಲಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ.


COMMERCIAL BREAK
SCROLL TO CONTINUE READING

ಇದೇ ಆಗಸ್ಟ್ 19ಕ್ಕೆ ಸಚಿವ ಸಂಪುಟ ರಚನೆಗೆ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿತ್ತು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಲಿರುವ ಸಿಎಂ  ಬಿಜೆಪಿ ಹೈಕಮಾಂಡ್​ ಭೇಟಿಯಾಗಿ ಸಚಿವರ ಪಟ್ಟಿಯನ್ನು ಫೈನಲ್​ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 


ಸಚಿವ ಸಂಪುಟದ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ ಆಗಸ್ಟ್​ 17ರಂದು ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಬಳಿಕ ಆಗಸ್ಟ್​ 18ರಂದು ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.


ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್​ ನಿಧನ ಹಾಗೂ ಕರ್ನಾಟಕದಲ್ಲಿನ ಪ್ರವಾಹ ಪರಿಸ್ಥಿತಿಯಿಂದಾಗಿ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ಸಾಧ್ಯವಾಗದೆ ಹಿಂದಿರುಗಿದ್ದರು.