ನವದೆಹಲಿ : ರಾಜ್ಯದ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ನೆರವು ನೀಡದಿದ್ದರೂ ಸಾಲ ಮನ್ನಾ ಮಾಡಲು ಸರ್ಕಾರ ಪ್ರಯತ್ನಿಸಲಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯ ಕೋರಲು ದೆಹಲಿಗೆ ಆಗಮಿಸಿದ್ದ ಜಿ. ಪರಮೇಶ್ವರ್ ಅವರು, ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಜೆಪಿ ಸಂಸದರನ್ನೂ ಸೇರಿದಂತೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ನಿಯೋಗ ಕರೆತಂದು, ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ರೈತರ ಸಾಲ ಮನ್ನಾ ಮಾಡಲು ನೆರವು ಕೇಳಿದ್ದರು. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಕಡೆಗೆ, ಕೇಂದ್ರ ಸರ್ಕಾರದ ನೆರವಿಲ್ಲದೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಸಾಲಮನ್ನ ಮಾಡಿತ್ತು ಎಂದು ಹೇಳಿದರು.
ಮುಂದುವರೆದು, ಈ ಬಾರಿಯೂ ರೈತರ ಸಾಲ ಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ಭೇಟಿ ಮಾಡಿ, ಕೇಂದ್ರದ ನೆರವು ಕೋರಿದ್ದಾರೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಅರಿತು ಕೇಂದ್ರ ಸರ್ಕಾರ ನೆರವು ನೀಡಿದರೆ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಶಕ್ತಿ ಬರಲಿದೆ. ಒಂದು ವೇಳೆ ಕೇಂದ್ರ ಸರ್ಕಾರ ನೆರವು ನೀಡದಿದ್ದರೂ, ರೈತರ ಸಾಲ ಮನ್ನಾ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಹಣಕಾಸು ಇಲಾಖೆ ಸಿದ್ಧತೆ ನಡೆಸಿದೆ ಎಂದು ಪರಮೇಶ್ವರ್ ಹೇಳಿದರು.