ಸಿಎಂ ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿಸಿದ್ದಾರೆ: ಸುಮಲತಾ ದೂರು
ನಮ್ಮ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದ್ದು, ಗುಪ್ತಚರ ಇಲಾಖೆ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಸುಮಲತಾ ಆರೋಪಿಸಿದ್ದಾರೆ.
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸೋಮವಾರ ದೂರು ಸಲ್ಲಿಸಿದ ಸುಮಲತಾ, ನಮ್ಮ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದ್ದು, ಗುಪ್ತಚರ ಇಲಾಖೆ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಮನೆಯ ಹತ್ತಿರ ಗುಪ್ತದಳದವರನ್ನು ನಿಯೋಜಿಸಲಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಂಡ್ಯದಲ್ಲಿ ತಮಗೆ ಬೆದರಿಕೆಯ ಹೇಳಿಕೆಗಳು ಹೆಚ್ಚುತ್ತಿವೆ. ತಮಗೆ ಭದ್ರತೆಯ ಕೊರತೆ ಇರುವುದರಿಂದ ಸರ್ಕಾರ ಹೆಚ್ಚುವರಿ ಭದ್ರತೆ ಒದಗಿಸಬೇಕು. ನಾನು ಹೈಪ್ರೊಫೈಲ್ ಹಾಗೂ ಅತಿ ಸೂಕ್ಷ್ಮವಾದ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಕುಮಾರಸ್ವಾಮಿ ಅವರು ತಮ್ಮ ಪುತ್ರನ ಪರ ಹಾಗೂ ನನ್ನ ವಿರುದ್ಧ ತಂತ್ರಗಳನ್ನು ಹೂಡುತ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತಿ ಉಲ್ಲಂಘನೆ ಮಾಡಿದ್ದಾರೆ ಎಂದು ಕುನವಾ ಆಯೋಗಕ್ಕೆ ದೂರು ನೀಡಿರುವುದಾಗಿ ಸುಮಲತಾ ಹೇಳಿದರು.
ಸಿಎಂ ಕುಮಾರಸ್ವಾಮಿ ಅವರು ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ದರ್ಶನ್, ಯಶ್, ಅಭಿಷೇಕ್ ನನ್ನ ಮನೆ ಮಕ್ಕಳು. ಅವರೆಲ್ಲಾ ನನ್ನ ಪರ ಪ್ರಚಾರಕ್ಕೆ ಬರುತ್ತಾರೆ. ಹಾಗಂತ ದರ್ಶನ್, ಯಶ್ಗೆ ಕಳ್ಳೆತ್ತು ಅಂತೀರಲ್ಲ ನಿಮ್ಮ ಘನತೆಗೆ ಇದು ಸರಿಯಾ? ಇಷ್ಟು ಲೋ ಲೆವೆಲ್ಗೆ ನೀವು ಇಳಿತೀರಾ? ಎಂದು ಪ್ರಶ್ನಿಸುವ ಮೂಲಕ ಸುಮಲತಾ ತಿರುಗೇಟು ನೀಡಿದರು.