ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶಾಸಕರ ಬೆಂಬಲಿಗರಿಂದ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ
ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ರೋಷನ್ ಬೇಗ್ ಅವರ ಬೆಂಬಲಿಗರು ಇಂದು ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಬೆಂಗಳೂರು : ಕಾಂಗ್ರೆಸ್'ನ ಹಲವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕರಾದ ಬಿ.ಕೆ.ಸಂಗಮೇಶ್ವರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ರೋಷನ್ ಬೇಗ್ ಅವರ ಬೆಂಬಲಿಗರು ಇಂದು ಸಚಿವ ಸ್ಥಾನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಇಂದ ಬೆಳಿಗ್ಗೆ ಸಿದ್ದರಾಮಯ್ಯ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಬೆಂಬಲಿಗರು, ಇದುವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿರುವುದು ಸಂಗಮೇಶ್ವರ್ ಅವರು ಮಾತ್ರ. ಆದರೂ ಅವರಿಗೆ ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತ್ತೊಂದೆಡೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಹಾಗೂ ಶಾಸಕ ರೋಶನ್ ಬೀಗ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಇಂದು ಬೆಳಿಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿಗೆ ಚಳ್ಳಕೆರೆ ಕಾರ್ಯಕರ್ತರು
ಸಚಿವ ಸ್ಥಾನ ದೊರೆಯದ ಶಾಸಕರ ಬೆಂಬಲಿಗರ ಪ್ರತಿಭಟನೆ ಇಷ್ಟಕ್ಕೆ ನಿಲ್ಲದೆ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕೆಪಿಸಿಸ್ ಕಚೇರಿ ಎದುರು ದರಣಿ ನಡೆಸಲು ಶಾಸಕರ ಬೆಂಬಲಿಗರು ಬಸ್ನಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾಯಿತಿ ಜನಪ್ರತಿನಿಧಿಗಳು ಇದರಲ್ಲಿ ಇದ್ದಾರೆ. ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಿದ್ಯುತ್ ಕಂಬ ಏರಿ ಪ್ರತಿಭಟನೆ
ಇನ್ನು, ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜು ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಅವರ ಬೆಮ್ಬಲಿಗನೋಬ ಹೊಸಕೋಟೆಯಲ್ಲಿ ವಿದ್ಯುತ್ ಕಂಬ ಏರಿ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಈಗಾಗಲೇ ನಾಗರಾಜ್ ಅವರು ಮೂರೂ ಬಾರಿ ಶಾಸಕ್ರಾಗಿದ್ದರೂ ಸಹ, ಅವರಿಗೆ ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ ಎಂದು ಆತ ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ಬುಧವಾರವಷ್ಟೇ ನಡೆದಿದ್ದು, ಜೆಡಿಎಸ್ ನ 10 ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ 15 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಇದುವರೆಗೂ ಖಾತೆ ಹಂಚಿಕೆಯಾಗಿಲ್ಲ.