ನವದೆಹಲಿ: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪರಿಶಿಷ್ಟ ಜಾತಿ/ಪಂಗಡದ ಸರ್ಕಾರಿ ನೌಕರರ   ಬಡ್ತಿ ಮೀಸಲಾತಿ ಕಾಯ್ದೆ 2002ನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. 


COMMERCIAL BREAK
SCROLL TO CONTINUE READING

2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಎಸ್​ಸಿ ಎಸ್​ಟಿ ​ಸರ್ಕಾರಿ ನೌಕರರಿಗೆ ಮೀಸಲಾತಿ ಆಧಾರದಲ್ಲಿ ಬಡ್ತಿ ನೀಡಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ 2002ರಲ್ಲಿ ತರಲು ಉದ್ದೇಶಿಸಿದ್ದ ಬಡ್ತಿ ಮೀಸಲಾತಿ ಕಾಯ್ದೆಯನ್ನು ಅನೇಕ ವಿರೋಧಗಳ ನಡುವೆಯೂ ಸುಗ್ರೀವಾಜ್ಞೆ ಮೂಲಕ  ಜಾರಿಗೆ ತಂದಿದ್ದರು. ಆದರೆ, ಈ ಕಾಯ್ದೆ ಜಾರಿಯಿಂದ ಸಾಮಾನ್ಯ ವರ್ಗದವರಿಗೆ ಅನ್ಯಾಯವಾಗಲಿದೆ ಎಂದು ಬಿ.ಕೆ.ಪವಿತ್ರ ಎಂಬುವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.


ಇಂದು ಆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದು, ಇದರಿಂದ ಪವಿತ್ರ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. 


ಬಡ್ತಿ ಮೀಸಲಾತಿ ಕಾಯ್ದೆ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಸಂತಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ನೌಕರಿಯಲ್ಲಿದ್ದ ಎಸ್​ಸಿ ಎಸ್​ಟಿ ನೌಕರರಿಗೆ ಅನುಕೂಲವಾಗಲೆಂದು ಮೀಸಲಾತಿ ಆಧಾರದಲ್ಲಿ ಬಡ್ತಿ ನೀಡುವ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಈ ಕಾಯ್ದೆಯನ್ನು ಸುಪ್ರೀಂ ಕೋರ್ಟ್​ ಎತ್ತಿಹಿಡಿದಿರುವುದು ಸ್ವಾಗತಾರ್ಹ. ಈ ಕಾಯ್ದೆಯ ಮೂಲಕ ಸಮಾಜದಲ್ಲಿ ಹಿಂದುಳಿದ ವರ್ಗದವರಿಗೆ ಸರ್ಕಾರಿ ಕ್ಷೇತ್ರದಲ್ಲಿನ ಪ್ರಮುಖ ಹುದ್ದೆಗಳು ದೊರಕಲಿವೆ. ಈ ಮೂಲಕ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಲಿದೆ” ಎಂದು ಟ್ವೀಟ್ ಮಾಡಿದ್ದಾರೆ.