ಮೈಸೂರು: ಕೋಮುವಾದಿ ಬಿಜೆಪಿಯನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಜಾತ್ಯಾತೀತ ಶಕ್ತಿಗಳು ಒಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.


COMMERCIAL BREAK
SCROLL TO CONTINUE READING

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈಶಾನ್ಯ ರಾಜ್ಯ ಚುನಾವಣೆಗಳ ಫಲಿತಾಂಶವು ಕರ್ನಾಟಕದಲ್ಲಿ ಮುಂಬರುವ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದರು.


"ಈಶಾನ್ಯ ಭಾರತದಲ್ಲಿ ಅಲ್ಲಿನ ಸ್ಥಳೀಯ ಪಕ್ಷಗಳೊಂದಿಗೆ ಮಾಡಿಕೊಂಡ ಚುನಾವಣೆ ಒಪ್ಪಂದಗಳು ಬಿಜೆಪಿಯ ಗೆಲುವಿಗೆ ಕಾರಣವಾಗಿದೆ" ಎಂದು ತಿಳಿಸಿದ ಸಿದ್ದರಾಮಯ್ಯ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಬಿಜೆಪಿಗೆ ರಾಜ್ಯದ ಜನ ಮತ ಹಾಕುವುದಿಲ್ಲ ಎಂಬ  
ವಿಶ್ವಾಸ ವ್ಯಕ್ತಪಡಿಸಿದ್ದಾರೆ. 


ಬಿಎಸ್ಪಿ-ಜೆಡಿ (ಎಸ್) ಪೂರ್ವ ಚುನಾವಣಾ ಒಪ್ಪಂದವು ಕಾಂಗ್ರೆಸ್ಗೆ ಸಮಸ್ಯೆಯಾಗಿಲ್ಲ. ಚುನಾವಣೆಯಲ್ಲಿ ಇದು ಯಾವುದೇ ಪರಿಣಾಮ ಬೀರುವುದಿಲ್ಲ. "ನಮ್ಮ ಏಕೈಕ ಗುರಿ ಕೋಮುವಾದಿ ಬಿಜೆಪಿಯನ್ನು ಸೋಲಿಸುವುದು," ಎಂಬುದನ್ನು ಸಿದ್ದರಾಮಯ್ಯ ಒತ್ತಿ ಹೇಳಿದರು.


ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಅವರು ದೆಹಲಿಗೆ ತೆರಳುವುದಾಗಿ ತಿಳಿಸಿದ ಅವರು "ಈ ಚುನಾವಣೆಯಲ್ಲಿ ಕಾಂಗ್ರೆಸಿಗೆ ಜೆಡಿಎಸ್ ಸಹಾಯ ಅಗತ್ಯವಿಲ್ಲ" ಎಂದು ಹೇಳಿದರು.


ಬೀದರ್ ಶಾಸಕ ಅಶೋಕ್ ಖೇಣಿ ಕಾಂಗ್ರೆಸಿಗೆ ಸೇರ್ಪಡೆಗೊಳ್ಳುವ ಬಗ್ಗೆ ಪಕ್ಷದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಪಕ್ಷದಲ್ಲಿ ಯಾವ ಶಾಸಕರೂ ವಿರೋಧ ವ್ಯಕ್ತಪಡಿಸಿಲ್ಲ, "ನಾನು ಊಹೆಗಳಿಗೆ ಪ್ರತಿಕ್ರಿಯಿಸುವುದಿಲ್ಲ" ಎಂದು ತಿಳಿಸಿದರು.


ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 21 ರಿಂದ 25 ರ ವರೆಗೆ ಮೈಸೂರು ಭಾಗದಲ್ಲಿ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 25 ರಂದು ಮೈಸೂರಿನಲ್ಲಿ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ  ಎಂದು ಸಿದ್ದರಾಮಯ್ಯ ತಿಳಿಸಿದರು.