ಪ್ರಧಾನಿ ಮಧ್ಯಸ್ಥಿಕೆ ಇಲ್ಲದೆ ಮಹದಾಯಿ ಸಮಸ್ಯೆಗೆ ಪರಿಹಾರ ಇಲ್ಲ: ಸಿಎಂ
ಗೋವಾ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದ ಬಿಜೆಪಿ ನಾಯಕರು ಇದುವರೆಗೂ ಮಾತುಕತೆ ನಡೆಸಿಲ್ಲ.
ಮಂಡ್ಯ: ಮಹಾದಾಯಿ ನದಿ ನೀರು ವಿಚಾರದಲ್ಲಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಪತ್ರ ಬರೆದಿದ್ದೇನೆ. ಆದರೆ, ಮಾತುಕತೆಗೆ ಅವರು ತಯಾರಿಲ್ಲ. ನ್ಯಾಯಾಧಿಕರಣದಲ್ಲೇ ವಿವಾದ ಇತ್ಯರ್ಥ ಅಗಲಿ ಎಂದು ಹೇಳುತ್ತಿದ್ದಾರೆ. ಹೀಗಾಗಿ ಪ್ರಧಾನಿಯವರು ಮಧ್ಯಪ್ರವೇಶ ಮಾಡದೆ ವಿವಾದ ಬಗೆಹರಿಯಲು ಸಾಧ್ಯವಿಲ್ಲ ಎಂದು ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೋವಾ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸುವುದಾಗಿ ಬಿಜೆಪಿ ನಾಯಕರು ಹೇಳಿದ್ದಾರೆ. ಆದರೆ, ಈವರೆಗೆ ಅವರು ಮಾತುಕತೆಗೆ ಹೋಗಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಆರಂಭಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮೇಕೆದಾಟು ಕುಡಿಯುವ ನೀರಿನ ಯೋಜನೆ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಿದ ಮುಖ್ಯಮಂತ್ರಿಗಳು, ಕೃಷ್ಣರಾಜಸಾಗರ ಜಲಾಶಯ ಅಚ್ಚುಕಟ್ಟು ಪ್ರದೇಶದ ರೈತರಿಗೆ ನಾಲೆ ಮೂಲಕ ನೀರು ಬಿಡುಗಡೆ ಮಾಡಲಾಗುವುದು. ನೀರಾವರಿ ಸಲಹಾ ಸಮಿತಿ ಈ ಕುರಿತು ನಿರ್ಣಯ ಕೈಗೊಳ್ಳಲಿದೆ ಎಂದು ವಿವರಿಸಿದರು.