ಕೊಡಗು: ಪ್ರವಾಹಪೀಡಿತ ಪ್ರದೇಶಗಳ ಪುನರ್ವಸತಿ ಮತ್ತು ಪರಿಹಾರ ಕಾರ್ಯಕ್ಕಾಗಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಕೊಡಗಿಗೆ 1 ಕೋಟಿ ರೂಪಾಯಿ ನೆರವು ನೀಡುವುದಾಗಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದ ಭಾರೀ ನಷ್ಟವಾಗಿದೂ, ಈ ಬಗ್ಗೆ ಇಂದು ಕೊಡಗಿಗೆ ಭೇಟಿ ನೀಡಿ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಜಿಲ್ಲಾಧಿಕಾರಿ ಶ್ರೀವಿದ್ಯಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರಿಂದ ಸಂಪೂರ್ಣ ಮಾಹಿತಿ ಪಡೆದರು.
ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿಕಾರಿಗಳು ಪರಿಹಾರ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಎಲ್ಲರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ರಕ್ಷಣಾ ಪಡೆಯ ವಿವಿಧ ಘಟಕಗಳು ಕೈಜೋಡಿಸಿ ಕಾರ್ಯನಿರ್ವಹಿಸುತ್ತಿವೆ. ಯಾವ ರೀತಿಯ ಪುನರ್ವಸತಿ ಆಗಬೇಕೆಂಬ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದೇನೆ. ಕೇಂದ್ರದಿಂದ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡಲಿದ್ದು, ಪ್ರವಾಹದಿಂದ ಆಗಿರುವ ನಷ್ಟದ ಬಗ್ಗೆ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ರಾಜ್ಯ ಹೆದ್ದಾರಿ ಮತ್ತು ಸ್ಥಳೀಯ ರಸ್ತೆ ಮಾರ್ಗಗಳು ಸಂಪೂರ್ಣ ಹಾನಿಗೊಳಗಾಗಿದೆ. ದೂರವಾಣಿ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಲಭ್ಯಗಳ ಮರುಸ್ಥಾಪನೆ ಕುರಿತಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮೇಲುಸ್ತುವಾರಿ ವಹಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಹಾಗೂ ಕೊಡಗಿನ ಪರಿಸ್ಥಿತಿ ಕುರಿತು ಪ್ರಧಾನಿಗೆ ವರದಿ ಸಲ್ಲಿಸುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.